ಬಿಜೆಪಿ ಶಾಸಕರ ಅರ್ನಹತೆ ವಿಚಾರ | ಮೇ 25ಕ್ಕೆ ಸ್ಪೀಕರ್ ಅಧ್ಯಕ್ಷತೆಯಲ್ಲಿ ಸಭೆ : ಕಾನೂನು ಸಚಿವ ಎಚ್.ಕೆ.ಪಾಟೀಲ್
ಎಚ್.ಕೆ.ಪಾಟೀಲ್
ಬೆಂಗಳೂರು : ಬಿಜೆಪಿ ಶಾಸಕರ ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಏನು ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲು ಮೇ 25ರಂದು ಸಂಜೆ 5 ಗಂಟೆಗೆ ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಶಾಸಕರ ಅನರ್ಹತೆ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲು, ಸ್ಪೀಕರ್ ಜೊತೆ ಚರ್ಚೆ ಮಾಡಲು ಮುಖ್ಯಮಂತ್ರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಅದರಂತೆ, ಮೇ 25ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಅದರಲ್ಲಿ ಮುಖ್ಯಮಂತ್ರಿ, ಸಂಸದೀಯ ವ್ಯವಹಾರಗಳ ಸಚಿವ, ವಿರೋಧ ಪಕ್ಷದ ನಾಯಕ ಹಾಗೂ ಸ್ಪೀಕರ್ ಯಾರನ್ನು ಸೂಚಿಸುತ್ತಾರೋ ಅವರು ಸಭೆಗೆ ಬರಬಹುದಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.