‘ಸರಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ’ಗೆ ಸಚಿವ ಸಂಪುಟ ಸಭೆ ಅನುಮೋದನೆ : ಎಚ್.ಕೆ.ಪಾಟೀಲ್
ಎಚ್.ಕೆ.ಪಾಟೀಲ್
ಬೆಂಗಳೂರು : ಸರಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂ.ಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆಯಡಿ ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಸಂಗ್ರಹಿಸಲಾಗುವುದು. ಹಾಗೂ ಉಳಿಕೆ ಹಣವನ್ನು ರಾಜ್ಯ ಸರಕಾರದಿಂದ ಭರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಅಪ್ಸರಕೊಂಡ-ಮುಗಲಿ ಕಡಲ ವನ್ಯ ಜೀವಿಧಾಮ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ-ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ತಿಳಿಸಿದರು.
ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗಳ ಪ್ರವೇಶಕ್ಕೆ ನಿರ್ಬಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೊನ್ನಾವರದ 8.21 ಕಿ.ಮೀ ಸಮುದ್ರ ತೀರದ ಪೈಕಿ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರಿನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಇತರ ನಿರ್ಣಯಗಳು: ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ಸಾಮಾನ್ಯ ಸಭೆಯ ಸದಸ್ಯರನ್ನು ಆರೋಗ್ಯ ಸಚಿವರು ನಾಮನಿರ್ದೇಶನ ಮಾಡಲು ಅಧಿಕಾರ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಪಾಶ್ವವಾಯು ಮತ್ತು ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಆರೈಕೆಗಾಗಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಸ್ಪೋಕ್ ಆಗಿ ಕಾರ್ಯನಿರ್ವಹಿಸುವ ಯೋಜನೆಯ 12.87 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಸಾಪೂರ ಗ್ರಾಮದ ಹೆಸರನ್ನು ‘ಗೇರುಗುಟ್ಟ ಬಸಾಪೂರ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು 23.51 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿ ನಾಲೆಯ ಮೇಲ್ಭಾಗದಲ್ಲಿ ಬ್ರಿಡ್ಜ್–ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ 134.56 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಸಿಂಧನೂರು ತಾಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ 43.10 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಎಂ.ಎಚ್.ಯು ಅಡಿಯಲ್ಲಿ ಸಂಚಾರಿ ಆರೋಗ್ಯ ಘಟಕಗಳ ಮೂಲಕ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ.
ಕೆ.ಎ.ಟಿ ವ್ಯವಸ್ಥೆಯ ಬಗ್ಗೆ ಸರಕಾರದ ಚಿಂತನೆ: ಕರ್ನಾಟಕ ಆಡಳಿತ ನ್ಯಾಯಾಧೀಕರಣ(ಕೆ.ಎ.ಟಿ) ಬಗ್ಗೆ ಸಾಕಷ್ಟು ಚರ್ಚೆ, ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ವ್ಯವಸ್ಥೆ ಬಗ್ಗೆ ರಾಜ್ಯ ಸರಕಾರ ಚಿಂತನೆ ಮಾಡುತ್ತಿದೆ ಎಂದು ಎಚ್.ಕೆ.ಪಾಟೀಲ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಅನುಭವ ಮಂಟಪ ನಿರ್ಮಾಣ: ಪರಿಷ್ಕೃತ ಅಂದಾಜಿಗೆ ಅನುಮೋದನೆ
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ. ಇದಕ್ಕೂ ಮೊದಲು 612 ಕೋಟಿ ರೂ. ನಿರ್ಮಾಣ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಜು.17ಕ್ಕೆ ನಂದಿ ಬೆಟ್ಟದಲ್ಲಿ ಸಂಪುಟ ಸಭೆ: ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜು.16 ಅಥವಾ 17 ರಂದು ನಿಗದಿಯಾಗಬಹುದು. ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಇಂದು ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಯಿತು ಎಂದು ಸುದ್ದಿಗಾರರ ಪ್ರಶ್ನೆಗೆ ಎಚ್.ಕೆ.ಪಾಟೀಲ್ ಉತ್ತರಿಸಿದರು.
ವಿಧೇಯಕಗಳ ಬಗ್ಗೆ ಚರ್ಚೆ: ಕರ್ನಾಟಕ ಬೃಹತ್ ಸಭೆ, ಸಮಾರಂಭಗಳ ಸ್ಥಳಗಳಲ್ಲಿ ಜನಸಂದಣಿ ನಿಯಂತ್ರಣ ವಿಧೇಯಕ -2025, ಕರ್ನಾಟಕ ರೋಹಿತ್ ವೆಮುಲಾ ವಿಧೇಯಕ-2025, ಕರ್ನಾಟಕ ತಪ್ಪು ಮಾಹಿತಿ, ಸುಳ್ಳು ಸುದ್ದಿ ನಿಯಂತ್ರಣ ವಿಧೇಯಕ-2025, ಕರ್ನಾಟಕ ದ್ವೇಷ ಭಾಷಣ ಮತ್ತು ಅಪರಾಧ ನಿಯಂತ್ರಣ ವಿಧೇಯಕ-2025ರ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದ್ದು, ಕೆಲವು ಬಿಲ್ಲುಗಳಲ್ಲಿ ವಿವರವಾದ ಚರ್ಚೆಯಾಗಬೇಕೆಂದು ತೀರ್ಮಾನಿಸಿ ಮುಂದಿನ ಸಚಿವ ಸಂಪುಟಕ್ಕೆ ತರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.