‘ಪರಿಶಿಷ್ಟ ಜಾತಿ ಒಳಮೀಸಲಾತಿ ಅನುಷ್ಠಾನ’ ಮುಂದಿನ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡನೆ : ಎಚ್.ಕೆ.ಪಾಟೀಲ್
Update: 2025-10-30 21:21 IST
ಬೆಂಗಳೂರು : ಪರಿಶಿಷ್ಟ ಜಾತಿ ಒಳಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರಡು ಮಸೂದೆಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ(ಬುಧವಾರ) ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರಡು ಮಸೂದೆ ರಚಿಸಿ, ಇಂದಿನ ಸಂಪುಟ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಗಿತ್ತು ಎಂದು ಹೇಳಿದರು.
ಆದರೆ, ಈ ಬಗ್ಗೆ ಇನ್ನೂ ಹೆಚ್ಚಿನ ಚರ್ಚೆಯ ಅಗತ್ಯವಿರುವುದರಿಂದ ಕರಡು ಮಸೂದೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಸಭೆ ಮಾಡಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡನೆ ಮಾಡಲಾಗುವುದು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.