ಪೊಲೀಸ್ ಇಲಾಖೆಯ 15 ಸಾವಿರ ಹುದ್ದೆಗಳು ಶೀಘ್ರದಲ್ಲೇ ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್
ಡಾ.ಜಿ.ಪರಮೇಶ್ವರ್
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 545 ಪಿಎಸ್ಸೈಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‍ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್ಸೈಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದರು.
ರಿಯಲ್ ಎಸ್ಟೇಟ್ ದಂಧೆಯ ಏಜೆಂಟ್‍ಗಳೊಂದಿಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಶಾಮಿಲಾಗುವುದನ್ನು ಸಹಿಸಲಾಗುವುದಿಲ್ಲ. ಅವರೊಂದಿಗೆ ತೊಡಗಿರುವುದು ಕಂಡುಬಂದರೆ, ಯಾವುದೇ ರೀತಿಯ ಮುಲಾಜಿಲ್ಲದೇ ಕೂಡಲೇ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ರಾಜ್ಯಾದ್ಯಂತ ಮನೆಮನೆಗೆ ಪೊಲೀಸ್ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ. ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.