ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ | ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ದೂರು; ಡಿಜಿಪಿಗೆ ಪತ್ರ
ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೆ, ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕೂಡ ಬರೆಯಲಾಗಿದೆ.
ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಲಾಗಿದೆ. ಇಂತಹ ಘಟನೆಗಳು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಲಿಂಗಾಧಾರಿತ ಹಿಂಸೆಯಿಂದ ರಕ್ಷಿಸುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಯೋಗವು ತೀವ್ರವಾಗಿ ಖಂಡಿಸಿದೆ.
ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿ ಆಯೋಗವು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ(ಡಿಜಿಪಿ) ಪತ್ರ ಬರೆದಿದ್ದು, ಪ್ರಕರಣದ ಕುರಿತು ಎಫ್‍ಐಆರ್ ದಾಖಲಾಗಿರದಿದ್ದಲ್ಲಿ ಕೂಡಲೇ ದಾಖಲಿಸಬೇಕು. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆ ನಡೆಸಬೇಕು. ದುಷ್ಕೃತ್ಯ ನಡೆದಿರುವುದು ಸಾಬೀತಾದಲ್ಲಿ, ಸಂಬಂಧಿಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಹಾಗೂ ಕಾನೂನಿನ ಪ್ರಕಾರ ಪರಿಹಾರ ದೊರಕುವಂತೆ ಖಚಿತಪಡಿಸಬೇಕು ಎಂದು ಪ್ರಕಟನೆಯಲ್ಲಿ ಒತ್ತಾಯಿಸಿದೆ.
ಐದು ದಿನದೊಳಗೆ ವರದಿ ಸಲ್ಲಿಸಲು ಸೂಚನೆ: ಈ ಪ್ರಕರಣದ ಕುರಿತು ಕೈಗೊಳ್ಳಲಾದ ಕ್ರಮಗಳ ಬಗ್ಗೆ ಐದು ದಿನಗಳೊಳಗೆ ವಿವರವಾದ ವರದಿಯನ್ನು ಸಲ್ಲಿಸಬೇಕೆಂದು ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ ನೀಡಿದೆ.