×
Ad

ಡಿ.ಕೆ.ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ: ಎಚ್.ವಿಶ್ವನಾಥ್

Update: 2025-01-22 19:05 IST

 ಎಚ್.ವಿಶ್ವನಾಥ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ಬುಧವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಲಾಗುತ್ತಿದೆ, ಇದೆಲ್ಲಾ ಬಾಲಿಶತನ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲಲು ಡಿ.ಕೆ.ಶಿವಕುಮಾರ್ ಅವರ ಕೊಡುಗೆ ಬಹಳಷ್ಟಿದೆ. ಅವರದ್ದು ಸಾಕಷ್ಟು ಖರ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತುಕತೆಯಾಗಿತ್ತು. ಹೀಗಾಗಿ ಮುಂದೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಎಚ್.ವಿಶ್ವನಾಥ್ ಹೇಳಿದರು.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರಲ್ಲ. ಅವರಿಗೆ ಏನು ಆಗಬೇಕೊ ಅದಾಗಿದೆ. ಕಾಂಗ್ರೆಸ್ ಪಕ್ಷದ ಘನತೆ ಹಾಗೂ ಖ್ಯಾತಿಯನ್ನು ಕಟ್ಟಿಕೊಂಡು ಅವರಿಗೇನು ಆಗಬೇಕು. ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರ ಹಿಂದೆ ಸಿದ್ದರಾಮಯ್ಯ ಇರುವುದು ಖಚಿತ ಎಂದು ಎಚ್.ವಿಶ್ವನಾಥ್ ತಿಳಿಸಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮರ್ಯಾದೆ ಕಳೆದುಕೊಂಡಿದ್ದಾರೆ. ಮೈಸೂರು ಜನರಿಗೆ ಮನೆ ಕಟ್ಟಿಕೊಳ್ಳಲು ಒಂದು ಸೈಟ್ ಕೊಡುವುದಿಲ್ಲ. ಬದಲಾಗಿ ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮಷ್ಟಕ್ಕೆ ತಾವೇ ನಿವೇಶನಗಳನ್ನು ಬರೆಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಮೈಸೂರು ವಿಜಯನಗರ ಸಾಮ್ರಾಜ್ಯವಾದಂತಿದೆ ಎಂದು ಎಚ್.ವಿಶ್ವನಾಥ್ ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News