ಪ್ರಧಾನಿ ಮೋದಿ ಹೇಳಿದಂತೆ ಕುಮಾರಸ್ವಾಮಿ ಕೇಳ್ತಾರೆ: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ
ಎಚ್.ಡಿ. ದೇವೇಗೌಡ
ಬೆಂಗಳೂರು: ‘ಪ್ರಧಾನಿ ಮೋದಿ ಅವರು ಹೇಳಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೇಳುತ್ತಾರೆ. ಲೋಕಸಭೆಯಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿರುವ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಪ್ರಧಾನಿ ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡೊದಿಲ್ಲ. 92 ವರ್ಷ ಆಗಿದ್ದು, ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೇ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನನಪಿನ ಶಕ್ತಿ ಇದೆ ಎಂದು ಅವರು ಉಲ್ಲೇಖಿಸಿದರು.
ಇನ್ನೂ, ನಾನು ರಾಮಮಂದಿರ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಅದೇ ರೀತಿ, ಜ.22ರ ಬಳಿಕ ರಾಮಮಂದಿರಕ್ಕೆ ಹೋಗುತ್ತೇನೆ ಎಂದಿರುವ ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡಲು ಹೇಳಿದ್ದಾರೆ. ಇದು ಒಳ್ಳೆಯ ವಿಚಾರ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೆಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಪ್ರಮುಖರಿದ್ದರು.