ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಬುಧವಾರ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ. ಅವರಿಗೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರಿಗೆ ಪಶುಸಂಗೋಪನೆ, ಪಶು ವೈದ್ಯಕೀಯ ವಿಜ್ಞಾನ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಜೈನ್ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ಯೋಜನೆ, ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಅಲ್ಲದೇ, ಫೆ.20ರವರೆಗೆ ರಜೆಯಲ್ಲಿರುವ ವಿ.ಅನ್ಬುಕುಮಾರ್ ಕರ್ತವ್ಯಕ್ಕೆ ಹಿಂದಿರುಗುವವರೆಗೆ ಪಶುಸಂಗೋಪನೆ, ಪಶು ವೈದ್ಯಕೀಯ ವಿಜ್ಞಾನ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.