‘ಒಳಮೀಸಲಾತಿ ಅನುಷ್ಠಾನ’: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ
ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡನೆ:ಎಚ್.ಕೆ.ಪಾಟೀಲ್
ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದ್ದು, ಅದರಂತೆ ಗುರುವಾರ(ಅ.30) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡನೆ ಮಾಡಲಿದೆ.
ಬುಧವಾರ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರವೇ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ, ಹೊಸ ಕಾನೂನು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಒಳ ಮೀಸಲಾತಿ ಸಮರ್ಪಕವಾಗಿ ಅನುಷ್ಠಾನ ಮಾಡಲು, ಪರಿಶಿಷ್ಟ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಒದಗಿಸಲು ಕಾನೂನು ಮಾಡುವ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ನಾಳೆ(ಗುರುವಾರ) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸುತ್ತೇವೆ. ಎಲ್ಲರಿಗೂ ಅವಕಾಶ, ನ್ಯಾಯ ಕೊಡಲು ಕಾನೂನು ಜಾರಿಗೆ ರಾಜ್ಯ ಸರಕಾರ ಮುಂದಾಗಿದೆ. ಜತೆಗೆ, ನ್ಯಾಯಾಲಯದಲ್ಲಿಯೂ ನಮ್ಮ ಆದೇಶಕ್ಕೆ ತಡೆಯಾಜ್ಞೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.
ಸುಪ್ರೀಂ ನಿದೇರ್ಶನ ಪ್ರಕಾರವೇ ಒಳಮೀಸಲಾತಿ: ಇದಕ್ಕೂ ಮೊದಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರವೇ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು.ಆಯಾ ಇಲಾಖೆಯಲ್ಲಿ ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್‍ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದ್ದಾರೆ.
ಪ್ರಮುಖವಾಗಿ ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದ್ದು, ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು.
ಸಭೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಪ್ರಮುಖರಿದ್ದರು.
ಹೋರಾಟಗಾರರ ಮೇಲಿನ ಮೊಕದ್ದಮೆ ವಾಪಸ್ಸು..!
ರಾಜ್ಯದಲ್ಲಿ ಒಳ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸಲಾಗಿತ್ತು. ಈ ವೇಳೆ ಹಲವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
-ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ