×
Ad

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನ | ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

Update: 2025-09-10 20:51 IST

ಬೆಂಗಳೂರು, ಸೆ.10: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಳುಗಡೆ ಹೊಂದಲಿರುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೆ ಹಂತದಲ್ಲಿ ಸ್ವಾಧೀನಪಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿಎಂಸಿ ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದರು.

ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566 ಎಕರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ 51,148 ಕೋಟಿ ರೂ. ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ 87,818 ಕೋಟಿ ರೂ. ಅಂದಾಜಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ 17,627 ಕೋಟಿ ರೂ.ಆರಂಭದಲ್ಲಿ ಅಂದಾಜಿಸಲಾಗಿತ್ತು. ಪ್ರಸಕ್ತ ಪರಿಷ್ಕೃತ ಮೊತ್ತ 40,557.09 ಕೋಟಿ ರೂಪಾಯಿ ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದರು.

ಯೋಜನೆಗೆ ಸಂಬಂಧಿಸಿದಂತೆ 9 ಉಪ ಯೋಜನಾ ಸಿವಿಲ್ ಕಾಮಗಾರಿಗಳಿಗೆ ಪರಿಷ್ಕೃತ ಮೊತ್ತ 25,122.53 ಕೋಟಿ ರೂಪಾಯಿ ಅಂದಾಜಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ನಮ್ಮ ಸರಕಾರದ ವಾಗ್ದಾನವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಜಲಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News