ಇಂದಿನಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆ ಆರಂಭ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮೇ 5 ರಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ
ಸೋಮವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಕೊಠಡಿಯಲ್ಲಿ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಿಖರ ದತ್ತಾಂಶ ಸಂಗ್ರಹ ಕಾರ್ಯವೂ ಮೂರು ಹಂತಗಳಲ್ಲಿ ನಡೆಯಲಿದ್ದು, ಎರಡು ತಿಂಗಳಿನಲ್ಲಿಯೇ ಒಳ ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಸಂವಿಧಾನದ 341ನೆ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. ಅದರಂತೆ ಮೇ 5ರಿಂದ 17ರ ವರೆಗೆ ಮನೆ ಮನೆ ಸಮೀಕ್ಷೆ ನೆಡೆಯಲಿದೆ. 19ರಿಂದ 21ರ ವರೆಗೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮೇ 19ರಿಂದ 23ರ ವರೆಗೆ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದರು.
ಆದಿ ದ್ರಾವಿಡ, ಅದಿ ಕರ್ನಾಟಕ, ಆದಿ ಆಂಧ್ರ ಜಾತಿಗಳಲ್ಲಿ ಎಡ, ಬಲ ಗೊಂದಲ ನಿವಾರಣೆ ಯಾಗಬೇಕಿದೆ. ಸಮೀಕ್ಷೆ ಈ ಎಲ್ಲ ಗೊಂದಲಗಳಿಗೆ ಪರಿಹಾರ ನೀಡಲಿದೆ. ಅಷ್ಟೇ ಮಾತ್ರವಲ್ಲದೆ, ವರದಿ ಆಧಾರಿಸಿ ನ್ಯಾ.ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ 60 ದಿನಗಳಲ್ಲಿ ಶಿಫಾರಸ್ಸು ಮಾಡಲಿದೆ. ಆನಂತರ ಕೂಡಲೇ ತಕ್ಷಣ ಒಳಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲ ಪರಿಶಿಷ್ಟ ಜಾತಿಯ ಜನರು ಸಮೀಕ್ಷೆಯಲ್ಲಿ ಭಾಗವಹಿಸಬೇಕು. ವಲಸೆ ಹೋಗಿರುವ ಸುಮುದಾಯಗಳು ಆನ್‍ಲೈನ್ ಸೌಲಭ್ಯ ಬಳಸಿಕೊಳ್ಳಬೇಕು. ಸಂಘಟನೆಗಳು ನೇರವಾಗಬೇಕು ಎಂದು ಕೋರಿದ ಅವರು, 2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 2024ರಲ್ಲಿ ಸುಪ್ರೀಂಕೋರ್ಟ್ ಒಳಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು ಎಂದು ಉಲ್ಲೇಖಿಸಿದರು.
ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಎಲ್ಲ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಸಹಾಯವಾಣಿ, ಮೊಬೈಲ್ ಆ್ಯಪ್: ಸಮಾಜ ಕಲ್ಯಾಣ ಇಲಾಖೆಯ ಮೊಬೈಲ್ ಆ್ಯಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರ ವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿದೆ. ಜತೆಗೆ, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-202 ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ ಕಂಟ್ರೋಲ್ ರೂಂ 94823 00400 ಹಾಗೂ ಒಳ ಮೀಸಲಾತಿ ಆಯೋಗ 94813 59000ಕ್ಕೆ ಸಂಪರ್ಕಿಸಬಹುದಾಗಿದೆ.
ಗಣತಿಗೆ 65 ಸಾವಿರ ಮಂದಿ: ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ಕೈಗೊಳ್ಳುವ ಸಂಬಂಧ ಈಗಾಗಲೇ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ಇವುಗಳ ಮೇಲುಸ್ತುವಾರಿಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷೆಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಮೊದಲನೇ ಹಂತದಲ್ಲಿ ಇಂದಿನಿಂದ ಮೇ17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಮೇ 19 ರಿಂದ ಮೇ21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಮೂರನೆ ಹಂತದಲ್ಲಿ ಮೇ19 ರಿಂದ ಮೇ23ರ ವರೆಗೆ ಆನ್‍ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಸಮೀಕ್ಷೆಗೆ ನೇಮಕವಾಗಿರುವ ಸುಮಾರು 65,000 ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸಮೀಕ್ಷೆಯ ಕುರಿತು ಈಗಾಗಲೇ ತಾಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.