ಜನವರಿಯಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ : ಡಾ.ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು, ಸೆ.19: ರಾಜ್ಯದ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ವರ್ಷದ ಜನವರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗ ಮೇಳವನ್ನು ರಾಜ್ಯ ಸರಕಾರದ ವತಿಯಿಂದ ಏರ್ಪಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಯುವಕ-ಯುವತಿಯರು ಬೇರೆ ದೇಶಗಳಲ್ಲಿಯೂ ಉದ್ಯೋಗ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಬೇರೆ ದೇಶದ ಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗ ಮೇಳವನ್ನು ರಾಜ್ಯ ಸರಕಾರವೇ ಆಯೋಜನೆ ಮಾಡಲಿದೆ.ಇದರಿಂದ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ತಿಳಿಸಿದರು.
ಅದೇ ರೀತಿ, ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಿದವರಿಗೆ ಇಟಲಿ, ಜರ್ಮನಿ, ಗಲ್ಫ್ ರಾಷ್ಟ್ರಗಳು ಸೇರಿದಂತೆ ಅನೇಕ ದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ವತಿಯಿಂದಲೇ ನರ್ಸಿಂಗ್ ಮಾಡಿದವರನ್ನು ಗುರುತಿಸಿ ಪ್ರತ್ಯೇಕ ಉದ್ಯೋಗ ಮೇಳವನ್ನು ಇದೇ ವರ್ಷದ ನವೆಂಬರ್‍ನಲ್ಲಿ ಮಾಡಲು ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಸಚಿವರು ಹೇಳಿದರು.
ರಾಜ್ಯ ಸರಕಾರ ಮುಂಬರುವ ದಿನಗಳಲ್ಲಿ ಕೌಶಲ್ಯ ನೀತಿ ರೂಪಿಸಲಾಗುತ್ತದೆ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಗಾಧವಾಗಿದೆ. ಅದಕ್ಕೆ ಸ್ಪಷ್ಟ ರೂಪ, ಕೌಶಲ್ಯ ತರಬೇತಿ ನೀಡಿದರೆ ನಮ್ಮ ರಾಜ್ಯ ಮತ್ತು ನಮ್ಮ ರಾಜಧಾನಿ ಅತ್ಯಂತ ವೇಗವಾಗಿ ಬೆಳೆಯುವ ವಿಶ್ವಾಸವಿದೆ ಎಂದೂ ಅವರು ಉಲ್ಲೇಖಿಸಿದರು.