ನಾಳೆ(ಜ.21) ಬೆಳಗಾವಿಯಲ್ಲಿ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಸಮಾವೇಶ
ಸಮಾವೇಶದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ, ಡಿಸಿಎಂ
ಬೆಂಗಳೂರು : ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಜ.21ರಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶವನ್ನು ಆಯೋಜಿಸಲಾಗಿದೆ.
ಕಳೆದ ಡಿಸೆಂಬರ್ 26 ಹಾಗೂ 27ರಂದು ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಕಾರ್ಯಕ್ರಮದ ಅಂಗವಾಗಿ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಡಿ.26ರಂದು ರಾತ್ರಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಡಿ.27ರಂದು ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶವನ್ನು ಮುಂದೂಡಲಾಗಿತ್ತು.
ಇದೀಗ, ಅದೇ ಸಿಪಿಇಡಿ ಮೈದಾನದಲ್ಲಿ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿರುವ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ 60ಕ್ಕೂ ಹೆಚ್ಚು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ.
ಅಲ್ಲದೇ, ಬೆಳಗಾವಿಯ ಸುವರ್ಣ ವಿಧಾನಸೌಧ ಆವರಣದಲ್ಲಿ ‘ಮಹಾತ್ಮ ಗಾಂಧಿ ಪ್ರತಿಮೆ’ಯನ್ನು ಅನಾವರಣಗೊಳಿಸಲಾಗುತ್ತಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದ ಬಳಿಕ ಅಲ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣ್ಯರಿಗೆ ಭೋಜನಕೂಟವನ್ನು ಆಯೋಜಿಸಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಅಧಿವೇಶನವನ್ನು ಯಶಸ್ವಿಗೊಳಿಸುವ ಸಂಬಂಧ ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರು, ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು.
ಅಲ್ಲದೇ, ಇತ್ತೀಚೆಗೆ ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ ಸೇರಿದಂತೆ ಇನ್ನಿತರ ಜಿಲ್ಲೆಗಳ ಮುಖಂಡರೊಂದಿಗೂ ಸರಣಿ ಸಭೆಗಳನ್ನು ನಡೆಸಿದ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಮಾವೇಶದ ಯಶಸ್ಸಿಗೆ ಸಂಬಂಧಿಸಿದಂತೆ ಸಮಾಲೋಚನೆಗಳನ್ನು ನಡೆಸಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಶಾಸಕರಿಗೆ ಪ್ರತ್ಯೇಕವಾದ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರತಿಯೊಂದು ವಿಚಾರಕ್ಕೂ ಪ್ರತ್ಯೇಕವಾದ ತಂಡಗಳನ್ನು ರಚನೆ ಮಾಡಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ರಾಷ್ಟ್ರಮಟ್ಟದ ನಾಯಕರ ಆಗಮನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.