ನೆಲ, ಜಲ, ಭಾಷೆ ವಿಚಾರದಲ್ಲಿ ಜೆಡಿಎಸ್ ರಾಜಕೀಯ ಮಾಡುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ನೆಲ, ಜಲ, ಭಾಷೆ ವಿಚಾರದಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್) ಯಾವುದೇ ಸಂದರ್ಭದಲ್ಲಿ ರಾಜಕೀಯವನ್ನು ಮಾಡುವುದಿಲ್ಲ. ರಾಜ್ಯದ ಪರವಾದ ನಿಲ್ಲುವನ್ನು ಹೊಂದಿರುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಗುರುವಾರ ಇಲ್ಲಿನ ದೇವನಹಳ್ಳಿಯ ಹ್ಯಾಡಳ ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಗೋಪುರ ಕಳಶ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜವಾಬ್ದಾರಿ ಇದೆ. ಹೀಗಾಗಿ ಪಕ್ಷವು ಅಗತ್ಯ ಸಹಕಾರ ನೀಡಲಿದೆ ಎಂದರು.
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇವೆಲ್ಲದಕ್ಕೂ ಶೀಘ್ರದಲ್ಲಿ ಆ ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಗೊಂದಲಗಳನ್ನು ಬಗೆಹರಿಸಲಿದ್ದಾರೆ ಎಂದ ನಿಖಿಲ್ ಕುಮಾರಸ್ವಾಮಿ, ಶ್ರೀ ರಂಗನಾಥಸ್ವಾಮಿಯ ಆಶೀರ್ವಾದ ಪಡೆದು ಆ ಭಗವಂತನಲ್ಲಿ ಎಲ್ಲರಿಗೂ ಒಳ್ಳೆದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.