ಫೆ.22ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮುಂದೂಡಿಕೆ: ಕೆಪಿಎಸ್ಸಿ
ಬೆಂಗಳೂರು: 2024ರ ಮಾರ್ಚ್ 13ರಂದು ಅಧಿಸೂಷನೆ ಹೊರಡಿಸಲಾಗಿದ್ದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ 50 ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಫೆ.22ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ರಣದೀಪ್ ಚೌಧರಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿದ ಅವರು, ಇತ್ತೀಚಿಗೆ ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಲಕ್ಷಾಂತರ ಅಭ್ಯರ್ಥಿಗಳು ಹಾಜರಾಗಿದ್ದು, ಅದರ ಫಲಿತಾಂಶವು ಶೀಘ್ರದಲ್ಲಿಯೇ ಪ್ರಕಟವಾಗಲಿದೆ. ಆ ಪರೀಕ್ಷೆಗಳಿಗೆ ಹಾಜರಾಗಿದ್ದ ಹಲವು ಅಭ್ಯರ್ಥಿಗಳು ಪ್ರಸ್ತುತ ಪರೀಕ್ಷೆಗಳಿಗೂ ಸಹ ಅಭ್ಯರ್ಥಿಗಳಾಗಿದ್ದು ಅವರು ಮತ್ತೊಮ್ಮೆ ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯುವುದರಿಂದ ಆಯೋಗಕ್ಕೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹೆಚ್ಚಿನ ಹೊರೆಯಾಗುವುದಲ್ಲದೆ ಅಭ್ಯರ್ಥಿಗಳಿಗೂ ಸಹ ಹೊರೆಯಾಗಲಿದೆ. ಆದ್ದರಿಂದ ಫೆ.22ರಂದು ನಿಗದಿಯಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮಾತ್ರ ಮುಂದೂಡಲಾಗಿದ್ದು, ಇತರ ಪತ್ರಿಕೆಗಳ ಪರೀಕ್ಷೆಗಳನ್ನು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆಯೇ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷಾ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನಡೆಸಿರುವ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.