ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ EVM ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ; ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಸಂಪುಟ ನಿರ್ಧಾರ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ)ದ ಬದಲಾಗಿ ಬ್ಯಾಲೆಟ್ ಪೇಪರ್ ಗಳನ್ನು ಬಳಸಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.
ಮತಗಳ್ಳತನದ ಪ್ರಕರಣಗಳು ಬಯಲಾದ ಬಳಿಕ ಜನಸಾಮಾನ್ಯರಲ್ಲಿ ಇವಿಎಂ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳು ಬಂದಿವೆ. ಆದುದರಿಂದ, ಸಚಿವ ಸಂಪುಟವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೇಟ್ ಪೇಪರ್ ಬಳಸಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ ಎಂದು ಅವರು ಹೇಳಿದರು.
ರಾಜ್ಯ ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆ. ಅದು ರಾಜ್ಯದ ಕಾನೂನಿನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು, ಪರಿಷ್ಕರಣೆ ಮಾಡಲು ಈಗಾಗಲೆ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಿಳಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಇವಿಎಂ ಬದಲು ಬ್ಯಾಲೇಟ್ ಪೇಪರ್ ಬಳಕೆಗೆ ಅವಕಾಶ ಕಲ್ಪಿಸುವ ಸಂಬಂಧ ಅಗತ್ಯ ಕಾನೂನು ಮತ್ತು ನಿಯಮಾವಳಿಗಳಿಗೆ ಮುಂದಿನ 15 ದಿನಗಳಲ್ಲಿ ತಿದ್ದುಪಡಿ ಮಾಡಲಾಗುವುದು. ಸರಕಾರ ಕಾನೂನು ರೂಪಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗ ಅದನ್ನು ಪಾಲಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಈ ಹಿಂದಿನ ವಿಧಾನಸಭೆಯಲ್ಲಿ ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣಾ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆಯೆ ವಿಶೇಷ ಅಧಿವೇಶನ ಕರೆದಿದ್ದರು. ಅಲ್ಲಿ ನಾನು ಈ ವಿಷಯದ ಕುರಿತು ಸುದೀರ್ಘವಾಗಿ ಮಾತನಾಡಿದೆ. ಅಲ್ಲದೇ, ಸುಮಾರು 3450 ಪುಟಗಳಷ್ಟು ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದೆ. ಆದರೆ, ಯಾವುದೆ ಪ್ರಯೋಜನವಾಗಲಿಲ್ಲ ಎಂದು ಎಚ್.ಕೆ.ಪಾಟೀಲ್ ಹೇಳಿದರು.