ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ರಾಜ್ಯ ಸರಕಾರವು 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ನಕುಲ್ ಎಸ್.ಎಸ್. ಅವರನ್ನು ಮುಖ್ಯಮಂತ್ರಿಯ ಕಾರ್ಯದರ್ಶಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ರಾಮ್ ಪ್ರಸಾತ್ ಮನೋಹರ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ, ಕೆಎಂಇಆರ್‍ಸಿ ವ್ಯವಸ್ಥಾಪಕ ನಿರ್ದೇಶಕ ಅಭಿರಾಮ್ ಜಿ.ಶಂಕರ್ ಅವರನ್ನು ಆರ್ಥಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಪಾಟೀಲ್ ಯಳಗೌಡ ಶಿವನಗೌಡ ಅವರನ್ನು ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ರಾಜ್ಯ ಪ್ರವಾಸೋದ್ಯಮ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್. ಅವರನ್ನು ಪ್ರವಾಸೋದ್ಯಮ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶೇಕ್ ತನ್ವೀರ್ ಆಸಿಫ್ ಅವರನ್ನು ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಆರ್. ಅವರನ್ನು ಮುಖ್ಯಮಂತ್ರಿಯ ಉಪ ಕಾರ್ಯದರ್ಶಿ-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶಿಸಲಾಗಿದೆ.