ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಆದರೆ, ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಪಾಲಿಕೆ ಚುನಾವಣೆಗಳು ಯಾವಾಗ ನಡೆಯಬಹುದು ಎಂದು ಸೋಮವಾರ ಸದಾಶಿನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.
ಜಿಬಿಎ ಪಾಲಿಕೆಗಳ ಚುನಾವಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದರು.
ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ನಮ್ಮ ಸರಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲ ಚುನಾವಣೆಗಳನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತಯಂತ್ರ ಹೊರತಾಗಿ ಮತಪತ್ರ ಬಳಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎಂಬುದಕ್ಕಿಂತ ಮತದಾನ ನಡೆಯುವುದು ಬಹಳ ಮುಖ್ಯ ಎಂದು ತಿಳಿಸಿದರು.
ಈಗ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ನಾವು ಈಗಾಗಲೇ ಬಿಎಲ್‍ಎಗಳ ಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಮತದಾರರ ಹೆಸರು ಪಟ್ಟಿಯಲ್ಲಿ ಬಿಟ್ಟುಹೋಗಿದ್ದರೆ ಅವರಿಗೆ ಮತ್ತೆ ಅವಕಾಶ ಕಲ್ಪಿಸಬೇಕು ಹಾಗೂ ಅವರ ಹಕ್ಕನ್ನು ಅವರಿಗೆ ನೀಡಬೇಕು. ಅಧಿಕಾರಿಗಳ ಕಾರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದಕ್ಕಾಗಿಯೇ ಇರುವ ಕಾನೂನು ಚೌಕಟ್ಟಿನಲ್ಲಿ ಚುನಾವಣಾ ಆಯೋಗ ಕೆಲಸ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗದ ಮೇಲಿನ ಅನುಮಾನದಿಂದ ಮತಪತ್ರ ಬಳಸಲಾಗುತ್ತಿದ್ದೆಯೇ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಮಾಡಲು ನಾವ್ಯಾರು? ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗ. ರಾಜ್ಯ ಚುನಾವಣಾ ಆಯೋಗ ನಮ್ಮ ಸರಕಾರದ ನಿಯಂತ್ರಣಕ್ಕೆ ಬರುವುದಿಲ್ಲ. ಅವರೇ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.