ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ: ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ, ಆಂತರಿಕ ತನಿಖಾ ಉಪಸಮಿತಿ ರಚನೆ

Update: 2026-07-26 20:46 IST

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‍ಸಿ) ತುರ್ತು ಸಭೆ ನಡೆಸಿ, ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ನೀಡಿ, ಆರೋಪಗಳ ಪರಿಶೀಲನೆಗೆ ಆಂತರಿಕ ತನಿಖಾ ಉಪಸಮಿತಿ ರಚನೆ ಮಾಡಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಕೆ.ಜ್ಯೋತಿ ತಿಳಿಸಿದ್ದಾರೆ.

ರವಿವಾರ ಪ್ರಕಟಣೆ ಹೊರಡಿಸಿರುವ ಅವರು, ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ವಾರದಲ್ಲಿ ವರದಿ ಸಲ್ಲಿಕೆ: ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ. ವರದಿಯನ್ನು ಸಲ್ಲಿಸುವವರೆಗೆ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತನಿಖಾ ಕಾರ್ಯಕ್ಕೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್‍ಸಿ ಸಹಕಾರ ನೀಡಲಿದೆ. ಇನ್ನು ಅಗತ್ಯ ಕಾನೂನು ಸಲಹೆ ನೀಡಲು ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News