ಕೆಪಿಎಸ್‌ಸಿ ನೇಮಕಾತಿ ಹಗರಣ: ಬಸವರಾಜ್ ಕನ್ನಾಳೆಗೆ ಪೊಲೀಸ್ ಭದ್ರತೆಯಲ್ಲಿ ಆರು ದಿನಗಳ ಮಧ್ಯಂತರ ಜಾಮೀನು
ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಧ್ಯವರ್ತಿ ಬಸವರಾಜ್ ಕನ್ನಾಳೆಗೆ ಕರ್ನಾಟಕ ಹೈಕೋರ್ಟ್ ಪೊಲೀಸ್ ಭದ್ರತೆಯಲ್ಲಿ ಆರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬಸವರಾಜ್ ಕನ್ನಾಳೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ನಡೆಸಿತು. ಈ ವೇಳೆ ಕನ್ನಾಳೆ ಪರ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿ, ತಮ್ಮ ಕಕ್ಷಿದಾರರು ಮಗುವಿನ ತಂದೆಯಾಗಿದ್ದು, ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾನವೀಯತೆಯ ಆಧಾರದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್, ಕನ್ನಾಳೆ ವಿರುದ್ಧ ಗಂಭೀರ ಆರೋಪಗಳಿದ್ದು, ಜಾಮೀನು ನೀಡಿದರೆ ಅವರು ಪರಾರಿಯಾಗುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಪೊಲೀಸ್ ಭದ್ರತೆಯಲ್ಲಿ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡಬಹುದು ಎಂದು ಅವರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರುಣ್ ಶ್ಯಾಂ, ಪೊಲೀಸ್ ಭದ್ರತೆ ಅಗತ್ಯವಿಲ್ಲ, ಬೇಕಿದ್ದರೆ ನಿಗಾ ಇಡಬಹುದು ಎಂದು ತಿಳಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಪೀಠ, ಕನ್ನಾಳೆ ವಿರುದ್ಧ ಗಂಭೀರ ಆರೋಪಗಳಿರುವುದರಿಂದ ಪರಾರಿಯಾಗುವ ಸಾಧ್ಯತೆಯನ್ನೂ ಪರಿಗಣಿಸಿ, ಪೊಲೀಸ್ ಭದ್ರತೆಯಲ್ಲಿ ಬೀದರ್‌ಗೆ ತೆರಳಿ ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿತು. ಇದೇ ತಿಂಗಳ 15ರಿಂದ 20ರವರೆಗೆ ಆರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಈ ಅವಧಿಯಲ್ಲಿ ಮೊಬೈಲ್ ಫೋನ್ ಬಳಸಬಾರದು ಎಂಬ ಷರತ್ತನ್ನೂ ವಿಧಿಸಿತು.
ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಲಾಗಿದೆ.