ಕೆಪಿಎಸ್ಸಿ ನೇಮಕಾತಿ ಹಗರಣ : ಆಯೋಗದ ಮತ್ತಷ್ಟು ಅಕ್ರಮ ನೇಮಕಾತಿಗಳ ತನಿಖೆಗೆ ಹೈಕೋರ್ಟ್ ಆದೇಶ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಬೃಹತ್ ಅಕ್ರಮದ ತನಿಖೆಯನ್ನು ಆಯೋಗದ ಇತರ ನೇಮಕಾತಿಗಳಿಗೂ ವಿಸ್ತರಿಸಲು ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.
ಜಾರಿ ನಿರ್ದೇಶನಾಲಯ(ಈ.ಡಿ.) ಹಂಚಿಕೊಂಡಿರುವ ಮಾಹಿತಿಯ ಆಧಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿ, ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ವರ್ಗಾಯಿಸುವಂತೆ ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
ಪಶು ವೈದ್ಯಾಧಿಕಾರಿಗಳ ಅಕ್ರಮ ನೇಮಕಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೆಪಿಎಸ್ಸಿಯ ಕಾರ್ಯವೈಖರಿ ಹಾಗೂ ನೇಮಕಾತಿ ಪ್ರಕ್ರಿಯೆಯ ವಿಶ್ವಾಸಾರ್ಹತೆ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದೆ.
ನೇಮಕಾತಿಯಲ್ಲಿ ಅರ್ಹತೆಯನ್ನು ಕಡೆಗಣಿಸಿದರೆ ಹಗಲಿರುಳು ಕಷ್ಟಪಟ್ಟು ಓದುವ ಬಡ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯವೇನು? ಜನಸಾಮಾನ್ಯರು ಸಾಂವಿಧಾನಿಕ ವ್ಯವಸ್ಥೆಯನ್ನು ನಂಬುವುದಾದರೂ ಹೇಗೆ? ಕೆಪಿಎಸ್ಸಿಯ ಪ್ರತಿಯೊಂದು ನೇಮಕಾತಿಯಲ್ಲೂ ಹಗರಣಗಳೇ ಸದ್ದು ಮಾಡುತ್ತಿವೆಯಲ್ಲ? ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ಪಾರದರ್ಶಕವಾಗಿ ಏಕೆ ಕಾರ್ಯನಿರ್ವಹಿಸುತ್ತಿಲ್ಲ? ಎಂದು ನ್ಯಾಯಪೀಠ ಆಯೋಗವನ್ನು ತರಾಟೆಗೆ ತೆಗೆದುಕೊಂಡಿತು.
ಕೆಪಿಎಸ್ಸಿ ನಡೆಸಿರುವ ಹಲವು ನೇಮಕಾತಿಗಳಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ಈ.ಡಿ. ಅಧಿಕಾರಿಗಳು ಎಸ್ಐಟಿಯೊಂದಿಗೆ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಮತ್ತಷ್ಟು ಎಫ್ಐಆರ್ಗಳನ್ನು ದಾಖಲಿಸುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಸರಕಾರದ ಪರ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಈ.ಡಿ. ನೀಡಿರುವ ಮಾಹಿತಿ ಆಧರಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಈ.ಡಿ. ಹಂಚಿಕೊಂಡಿರುವ ಮಾಹಿತಿ ಬಗ್ಗೆಯೂ ಎಫ್ಐಆರ್ ದಾಖಲಿಸಬೇಕು. ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಎಸ್ಐಟಿಗೆ ವರ್ಗಾಯಿಸಬೇಕು ಎಂದು ಆದೇಶಿಸಿ ಅರ್ಜಿ ವಿಚಾರಣೆ ಮುಂದೂಡಿತು.