ಬೀದಿಬದಿ ವ್ಯಾಪಾರಿಗಳ ತೆರವುಗೊಳಿಸುತ್ತಿಲ್ಲ, ಸ್ಥಳಾಂತರಿಸುತ್ತಿದ್ದೇವೆ : ಕೃಷ್ಣಬೈರೇಗೌಡ
‘ಒತ್ತುವರಿ ತೆರವುಗೊಂಡ ಪ್ರದೇಶಗಳಲ್ಲಿ ತಕ್ಷಣ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸೂಚನೆ’
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದಿಲ್ಲ, ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿಂದ ವಾರ್ಡ್ ರಸ್ತೆಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಂಬಂಧಿತ ಅಧಿಕಾರಿಗಳ ಜೊತೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಿಂದ ಬೀದಿ ಬದಿ ವ್ಯಾಪಾರಿಗಳಷ್ಟೇ ಅಲ್ಲದೆ, ವಿವಿಧ ಅಡೆತಡೆಗಳು, ಅನಾಥ ವಾಹನಗಳು ಹಾಗೂ ಅಕ್ರಮವಾಗಿ ನಿಲ್ಲಿಸಿರುವ ಪಾರ್ಕಿಂಗ್ ವಾಹನಗಳನ್ನು ಸಹ ತೆರವುಗೊಳಿಸಿ, ನಾಗರಿಕರಿಗೆ ಸುಗಮ ಹಾಗೂ ವ್ಯವಸ್ಥಿತ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು.
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಮುಖ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಉಳಿದ ವಾರ್ಡ್ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಕುರಿತು ಮಾಹಿತಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಇರುವ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸಿದರೆ ಸಾರ್ವಜನಿಕರ ಬೆಂಬಲವೂ ದೊರೆಯುತ್ತದೆ. ಅಸಾಧ್ಯವೆನಿಸುವ ಕೆಲಸವನ್ನೂ ಸಾಧಿಸಬಹುದು. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೆಂಗಳೂರಿನ ನಾಗರಿಕರಿಗೆ ಸುಗಮ, ಸುರಕ್ಷಿತ ಹಾಗೂ ವ್ಯವಸ್ಥಿತ ಪಾದಚಾರಿ ಮಾರ್ಗಗಳನ್ನು ನಿರ್ಮಿಸಿಕೊಡಬೇಕು ಎಂದು ಕೃಷ್ಣಬೈರೇಗೌಡ ಹೇಳಿದರು.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿದ ರಸ್ತೆಗಳಲ್ಲಿ ತಕ್ಷಣವೇ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಬೇಕು. ಇತರೆ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ನಿರಂತರವಾಗಿ ತೆರವುಗೊಳಿಸುವ ಕಾರ್ಯವೂ ಸಮಾನಾಂತರವಾಗಿ ನಡೆಯಬೇಕು. ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಬೇಕು ಎಂದು ಕೃಷ್ಣಬೈರೇಗೌಡ ಸೂಚಿಸಿದರು.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲೂ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯ ಪೂರ್ಣಗೊಂಡ ಬಳಿಕ, ಅವುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು. ನಂತರ ಸ್ಥಳೀಯ ನಾಗರಿಕರೊಂದಿಗೆ ಅಭಿವೃದ್ಧಿಪಡಿಸಿದ ಪಾದಚಾರಿ ಮಾರ್ಗಗಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆಯಬೇಕು ಎಂದು ಕೃಷ್ಣಬೈರೇಗೌಡ ಸೂಚನೆ ನೀಡಿದರು.
•ಜು.10ರಿಂದ ಅನಾಥ ವಾಹನಗಳ ತೆರವು: ನಗರದ ರಸ್ತೆ ಬದಿಗಳಲ್ಲಿ ನಿಂತಿರುವ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು ಜು.10ರಿಂದ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸರ ಸಮನ್ವಯದೊಂದಿಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ, ವ್ಯವಸ್ಥಿತ ಕಾರ್ಯಯೋಜನೆ ರೂಪಿಸಿ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
•ತ್ಯಾಜ್ಯ-ಗಿಡಗಂಟಿಗಳ ತೆರವು: ನಗರದಲ್ಲಿರುವ ಬೃಹತ್ ಕಟ್ಟಡ ತ್ಯಾಜ್ಯ ಹಾಗೂ ಗಿಡಗಂಟಿಗಳ ತೆರವು ಅಭಿಯಾನವನ್ನು ಜುಲೈ 15ರ ನಂತರ ಆರಂಭಿಸಲು ಯೋಜನೆ ರೂಪಿಸಬೇಕು. ಈ ಅಭಿಯಾನವನ್ನು ನಗರ ಪಾಲಿಕೆ, ಮೆಟ್ರೋ ಹಾಗೂ ರೈಲ್ವೆ ಇಲಾಖೆಗಳ ಸಹಯೋಗದಲ್ಲಿ ಜಂಟಿಯಾಗಿ ನಡೆಸಿ, ನಗರವನ್ನು ಮತ್ತಷ್ಟು ಸ್ವಚ್ಛ ಹಾಗೂ ಸುಂದರಗೊಳಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕೃಷ್ಣಬೈರೇಗೌಡ ನಿರ್ದೇಶನ ನೀಡಿದರು.
•ಪಾದಚಾರಿ ಮಾರ್ಗಗಳ ಮೇಲಿನ ರ್ಯಾಂಪ್‍ಗಳ ತೆರವು: ನಗರದಲ್ಲಿ ಮತ್ತೊಂದು ಪ್ರಮುಖ ಸಮಸ್ಯೆಯೆಂದರೆ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಮುಂಭಾಗದಲ್ಲಿ ವಾಹನಗಳ ಪ್ರವೇಶಕ್ಕಾಗಿ ಪಾದಚಾರಿ ಮಾರ್ಗಗಳ ಮೇಲೆ ರ್ಯಾಂಪ್‍ಗಳನ್ನು ನಿರ್ಮಿಸಲಾಗಿದೆ. ಇದರಿಂದ ಪಾದಚಾರಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಮುಂದಿನ ಹಂತದಲ್ಲಿ ಇಂತಹ ರ್ಯಾಂಪ್‍ಗಳನ್ನು ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳುವಂತೆ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆಗಳ ಆಯುಕ್ತ ರಮೇಶ್ ಡಿ.ಎಸ್., ಪೆÇಮ್ಮಲ ಸುನೀಲ್ ಕುಮಾರ್, ಜಿ.ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಮುಖ್ಯ ಇಂಜಿನಿಯರ್‍ಗಳು ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವರ ವೀಡಿಯೋ ಸಂದೇಶ: ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಬೆಂಗಳೂರಿನ ನಾಗರಿಕರಲ್ಲಿ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, ‘ಸುಪ್ರೀಂ ಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಬೆಂಗಳೂರು ಉತ್ತಮ ನಗರವಾಗಿರಬೇಕು. ನಗರದಲ್ಲಿ ವಾಸಿಸುವ ಜನರಿಗೆ ಅಗತ್ಯ ಮೂಲಸೌಕರ್ಯಗಳು ಲಭ್ಯವಾಗಬೇಕು. ಅವುಗಳಲ್ಲಿ ಸುರಕ್ಷಿತ ಪಾದಚಾರಿ ಮಾರ್ಗವೂ ಒಂದು. ಎಲ್ಲ ರಸ್ತೆಗಳಲ್ಲಿಯೂ ಒತ್ತುವರಿ ತೆರವುಗೊಳಿಸುವುದು ತಕ್ಷಣ ಸಾಧ್ಯವಾಗದಿದ್ದರೂ, ಹೆಚ್ಚು ಜನ ಸಂಚರಿಸುವ ರಸ್ತೆಗಳಲ್ಲಿ ಆದ್ಯತೆಯ ಮೇರೆಗೆ ಕಾರ್ಯಾಚರಣೆ ನಡೆಸುವುದು ಸರಕಾರದ ಕರ್ತವ್ಯ. ಯಾರ ಜೀವನೋಪಾಯಕ್ಕೂ ತೊಂದರೆ ಉಂಟುಮಾಡುವುದು ಸರಕಾರದ ಉದ್ದೇಶವಲ್ಲ’ ಎಂದು ತಿಳಿಸಿದ್ದಾರೆ.