×
Ad

52 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ

Update: 2026-05-22 00:04 IST

File Photo

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಮೊಕದ್ದಮೆಗಳನ್ನು ಸಚಿವ ಸಂಪುಟ ಉಪ ಸಮಿತಿಯು ಫೆ.26ರಂದು ಮಾಡಿರುವ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಅಭಿಯೋಜನೆಯಿಂದ ಹಿಂಪಡೆಯಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಾರವಾರದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮಥ್ರ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ನಮ್ಮ ಕ್ಲಿನಿಕ್‍ಗಳಿಗೆ ಅವಶ್ಯವಿರುವ ಪ್ರಯೋಗಾಲಯ ಉಪ ಭೋಗ್ಯಗಳನ್ನು(ಆರ್.ಡಿ. ಕಿಟ್) ಮತ್ತು ವಿವಿಧ ಉಪಕರಣಗಳನ್ನು 22 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ 15ನೆ ಹಣಕಾಸು ಆಯೋಗದ ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿನ ವೈದ್ಯಕೀಯ ಬೋಧನಾ ಕಾಲೇಜು ಆಸ್ಪತ್ರೆಗಳಲ್ಲಿನ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕ್ಲೈಮ್ ಪ್ರಕ್ರಿಯೆಯನ್ನು 17.85 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಸುವ್ಯವಸ್ಥಿತ(ಡಿಜಿಟಲೀಕರಣ)ಗೊಳಿಸಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಕಾರವಾರ ಬಂದರಿನ ತೈಲ ಸೋರಿಕೆ ತುರ್ತು ನಿರ್ವಹಣಾ ಯೋಜನೆಯನ್ವಯ ತೈಲ ಸೋರಿಕೆ ಪ್ರತಿಕ್ರಿಯೆ ಉಪಕರಣಗಳನ್ನು 13 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಮಂಡ್ಯ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗೇಟ್‍ನಿಂದ ಬಸರಾಳು-ಕೊಪ್ಪ ರಸ್ತೆಗೆ ಸೇರುವ ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಗಳನ್ನು 11.40 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗಳ 10.61 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಲಬುರಗಿ ಜಿಲ್ಲೆಯ ಕಲಬುರಗಿ ತಾಲೂಕಿನ ಶರಣಸಿರಸಗಿ ಗ್ರಾಮದ ಸ.ನಂ.243ರಲ್ಲಿ 4 ಎಕರೆ ಗೋಮಾಳ ಜಮೀನನ್ನು ಕಲಬುರಗಿ ಜಿಲ್ಲಾ ಆದಿ ವೀರಶೈವ ಬಣಜಿಗ ಸಮಾಜ ಇವರಿಗೆ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಹೋಬಳಿಯ ಜಿಗಳ ಗ್ರಾಮದ ಸ.ನಂ.45ರಲ್ಲಿ 25 ಗುಂಟೆ ಸರಕಾರಿ ಗುಂಡುತೋಪು ಜಮೀನನ್ನು ಅತ್ತಿಬೆಲೆ ಪುರಸಭೆಗೆ ಎಫ್.ಎಸ್.ಟಿ.ಪಿ ನಿರ್ಮಾಣಕ್ಕಾಗಿ ಮಂಜೂರು ಮಾಡಲು ನಿರ್ಧರಿಸಲಾಗಿದೆ. ಕರ್ನಾಟಕ ಮಹಾನಗರ ಪಾಲಿಕೆಗಳು(ಮಹಾನಗರ ಪಾಲಿಕೆಗಳಲ್ಲಿ ಯುಜಿಡಿ ಸಹಾಯಕರ ನೇಮಕಾತಿ)(ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ)(ವಿಶೇಷ)ನಿಯಮಗಳು-2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು.

ಇತರ ನಿರ್ಣಯಗಳು: ದಾವಣಗೆರೆಯ ಶ್ರೀ ಪಂಚಮುಖಿ ವಿವಿಧೋದ್ದೇಶ ಸಹಕಾರ ಸಂಘದವರಿಗೆ ಶೈಕ್ಷಣಿಕ ಮತ್ತು ಸಮುದಾಯ ಭವನ ನಿರ್ಮಾಣದ ಉದ್ದೇಶಕ್ಕಾಗಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಿರುವ 497.60 ಚ.ಮೀ. ನಾಗರಿಕ ಸೌಲಭ್ಯ ನಿವೇಶನಕ್ಕೆ ರಿಯಾಯಿತಿ ದರದ ಗುತ್ತಿಗೆ ಮೊತ್ತ ನಿಗದಿಪಡಿಸಲು ನಿರ್ಧರಿಸಲಾಗಿದೆ.

ರಾಯಚೂರು ಜಿಲ್ಲೆಯ ರಾಯಚೂರು ಮತ್ತು ಮಾನ್ವಿ ತಾಲೂಕಿನ ವ್ಯಾಪ್ತಿಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಯಡಿ ಬರುವ ವಿತರಣಾ ಕಾಲುವೆ ಸಂಖ್ಯೆ 102 ಮತ್ತು 102ಎ ಗಳ ಅಚ್ಚುಕಟ್ಟು ಪ್ರದೇಶದಲ್ಲಿ 8320 ಹೆಕ್ಟೇರ್ ಬಾಧಿತ ಅಚ್ಚುಕಟ್ಟಿಗೆ ನೀರಾವರಿ ಸೌಲಭ್ಯ ಕಲ್ಪಿಸುವ 182.70 ಕೋಟಿ ರೂ.ಗಳ ಅಂದಾಜು ಮೊತ್ತದ ‘ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆ’ಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಶಾಲಾ ಪೂರ್ವ ಶಿಕ್ಷಣ ಕಿಟ್‍ಗಳನ್ನು ಪ್ರತಿ ಕೇಂದ್ರಕ್ಕೆ 3 ಸಾವಿರ ರೂ. ಘಟಕ ವೆಚ್ಚದಲ್ಲಿ 69,922 ಅಂಗನವಾಡಿಗಳಿಗೆ, ಒಟ್ಟು 20.98 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News