×
Ad

ರಾಜ್ಯ ನಾಯಕತ್ವದಲ್ಲಿ ಬದಲಾವಣೆ?; ದಿಲ್ಲಿಯಲ್ಲಿ ಬಿರುಸಿನ ಮಾತುಕತೆ

Update: 2026-05-26 23:00 IST

ಹೊಸದಿಲ್ಲಿ : ರಾಜ್ಯ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನುವ ವದಂತಿಗಳು ಕೇಳಿ ಬರುತ್ತಿವೆ.

ಮಂಗಳವಾರ ಹೊಸದಿಲ್ಲಿಯಲ್ಲಿನ ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆದ ಸರಣಿ ಸಭೆಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಜೊತೆ ಇಂದು ಎರಡು ಸುತ್ತಿನ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವಂತೆ ಮನವೊಲಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ನಾನು ರಾಜೀನಾಮೆ ನೀಡಿದ ಬಳಿಕ ಯಾರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನನ್ನ ಬಳಿಕ ಯಾರನ್ನಾದರೂ ಮುಖ್ಯಮಂತ್ರಿ ಮಾಡುವುದಾದರೆ ಅದು ದಲಿತ ಸಮುದಾಯದವರನ್ನು ಮಾಡಿ. ಇಷ್ಟು ವರ್ಷಗಳ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ಆ ಸಮುದಾಯಕ್ಕೆ ನ್ಯಾಯ ಕಲ್ಪಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಮುಂದಿಟ್ಟ ಪ್ರಸ್ತಾವಕ್ಕೆ ರಾಹುಲ್ ಗಾಂಧಿ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ದಲಿತ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆದರೆ, ಅವರಿಂದ ತೆರವಾಗುವ ರಾಜ್ಯಸಭೆಯ ಪ್ರತಿಪಕ್ಷ ನಾಯಕನ ಸ್ಥಾನವನ್ನು ನೀವು ಅಲಂಕರಿಸಿ ಎಂದು ರಾಹುಲ್ ಗಾಂಧಿ ಕೊಟ್ಟ ಆಹ್ವಾನದ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಷ್ಟ್ರ ರಾಜಕಾರಣದಲ್ಲಿ ನನಗೆ ಅನುಭವವಿಲ್ಲ. ಈ ವಿಚಾರದಲ್ಲಿ ಆಲೋಚನೆ ಮಾಡಲು ನನಗೆ ಸಮಯ ಕೊಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಬಳಿಕ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಸಿದ್ದರಾಮಯ್ಯ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಪರವಾಗಿ ಹೈಕಮಾಂಡ್ ಎದುರು ವಾದ ಮಂಡಿಸಲು ಯತ್ನಿಸಿದ ಅವರ ಆಪ್ತ ಸಚಿವರಾದ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಡಾ.ಎಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿಗೆ ರಾಹುಲ್ ಗಾಂಧಿ ಭೇಟಿ ಸಾಧ್ಯವಾಗಿಲ್ಲ.

ಇದಲ್ಲದೆ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಬಿಟ್ಟು ಪ್ರತ್ಯೇಕವಾಗಿ ಸಭೆ ನಡೆಸಿ, ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಇದು ನನಗೆ ಕೊನೆಯ ಅವಕಾಶ, ಸಾಧ್ಯವಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನನ್ನು ಪರಿಗಣಿಸುವಂತೆ ರಾಹುಲ್ ಗಾಂಧಿಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿರಿಯರು, ದಲಿತ ನಾಯಕರು, ಪಕ್ಷದ ನಿಷ್ಟಾವಂತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ನೀಡಲು ರಾಹುಲ್ ಗಾಂಧಿ ಸಹ ಒಲವು ಹೊಂದಿದ್ದಾರೆ. ಒಂದು ವೇಳೆ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆದರೆ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಇನ್ನೂ ಹೆಚ್ಚುವರಿ ನಾಲ್ಕು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿ ಮಾಡಬೇಕು. ಒಂದು ಪರಿಶಿಷ್ಟ ಪಂಗಡ, ಲಿಂಗಾಯತ, ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯದವರಿಗೆ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News