ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ
ಪುಟ್ಟಣ್ಣ
ಬೆಂಗಳೂರು : ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ಆ.7ರಂದು ರಾಜೀನಾಮೆ ನೀಡಿದ್ದರು. ಆ.13ರಿಂದ ಮಳೆಗಾಲದ ಅಧಿವೇಶನ ಹಿನ್ನೆಲೆ ಹಂಗಾಮಿ ಸಭಾಪತಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಇತ್ತ ಆ.14 ರಂದು ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ವಿಧಾನ ಪರಿಷತ್ತಿನ ಹಾಲಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಸಭಾಪತಿ ಅಭ್ಯರ್ಥಿಯಾಗಿದ್ದು, ಹಿರಿಯ ನಟಿ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಉಪಸಭಾಪತಿ ಸ್ಥಾನದ ಅಭ್ಯರ್ಥಿಯಾಗಿದ್ದಾರೆ.
ಈ ಮುಂಚೆ ಸಿಎಂ ಡಿ.ಕೆ.ಶಿವಕುಮಾರ್ ಬಸವರಾಜ ಹೊರಟ್ಟಿಯವರನ್ನೇ ಹಂಗಾಮಿ ಸಭಾಪತಿಯಾಗಿ ಮುಂದುವರಿಸುವುದಾಗಿ ತಿಳಿಸಿದ್ದರು. ಆದರೆ, ಬಸವರಾಜ್ ಹೊರಟ್ಟಿ ಹಂಗಾಮಿ ಸಭಾಪತಿಯಾಗುವುದಕ್ಕೆ ನಿರಾಕರಿಸಿದ್ದರು. ಈ ಹಿನ್ನೆಲೆ ಪುಟ್ಟಣ್ಣ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪುಟ್ಟಣ್ಣ, ನನ್ನನ್ನು ನೇಮಕ ಮಾಡಿರುವುದು ನನಗೆ ದೊರೆತ ಗೌರವ ಹಾಗೂ ಮಹತ್ವದ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಅವಕಾಶ ನೀಡಿದ ಮಾನ್ಯ ರಾಜ್ಯಪಾಲರಿಗೆ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಸದನದ ಘನತೆ, ಸಂಸದೀಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿದು, ನಿಷ್ಪಕ್ಷಪಾತವಾಗಿ ಮತ್ತು ಸಂವಿಧಾನಬದ್ಧವಾಗಿ ಕರ್ತವ್ಯ ನಿರ್ವಹಿಸುವುದಾಗಿ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.