ಸಾಂದರ್ಭಿಕ ಚಿತ್ರ | PC : Image by pch.vector on Magnific

ಬೆಂಗಳೂರು : ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ಪ್ರತಿಷ್ಠೆಯ ಕಣವಾಗಿರುವ ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯ ಮತದಾನ ನಾಳೆ (ಅ.23) ನಡೆಯಲಿದೆ.

ಬೆಂಗಳೂರು ಶಿಕ್ಷಕರ, ಈಶಾನ್ಯ ಶಿಕ್ಷಕರ, ಪಶ್ಚಿಮ ಪದವೀಧರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ವ್ಯಾಪ್ತಿಯ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಮತಗಟ್ಟೆಗಳಲ್ಲಿ ನಾಳೆ ಬೆಳಗ್ಗೆ 8ರಿಂದ ಸಂಜೆ 4ಗಂಟೆಯ ವರೆಗೆ ಮತದಾನ ಜರುಗಲಿದೆ.

ಲೋಕಸಭೆ ಚುನಾವಣೆಯಂತೆ ವಿಧಾನ ಪರಿಷತ್ತಿನ ಈ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಿದ್ದರೆ, ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಮಾಜಿ ಉಪ ಸಭಾಪತಿ ಪುಟ್ಟಣ್ಣ, ಜೆಡಿಎಸ್‍ನಿಂದ ಎ.ಪಿ. ರಂಗನಾಥ ಸೇರಿದಂತೆ ಒಟ್ಟು ಆರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಶರಣಪ್ಪ ಮಟ್ಟೂರು, ಬಿಜೆಪಿಯಿಂದ ಶಶೀಲ್ ಜಿ.ನಮೋಶಿ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಶಶಿ ಹುಲಿಕುಂಟೆಮಠ, ಬಿಜೆಪಿಯಿಂದ ಕೆ.ಎಂ.ಸುರೇಶ ಸೇರಿದಂತೆ 10 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಮೋಹನ ಲಿಂಬಿಕಾಯಿ, ಬಿಜೆಪಿಯಿಂದ ಎಸ್.ವಿ.ಸಂಕನೂರ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಅ.27ರಂದು ಈ ನಾಲ್ಕು ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor