ಘನತಾಜ್ಯ ವಿಲೇವಾರಿ | ಬಿಜೆಪಿ ನಾಯಕರ ಆರೋಪ ಆಧಾರ ರಹಿತ : ಎಂ.ಲಕ್ಷ್ಮಣ್
ಬೆಂಗಳೂರು : ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಮಾಡುತ್ತಿರುವ 39,000 ಕೋಟಿ ರೂ.ಅಕ್ರಮ ಹಾಗೂ ಲೂಟಿ ಆರೋಪಗಳು ಸಂಪೂರ್ಣ ಆಧಾರ ರಹಿತವಾಗಿದ್ದು, ಜನರನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತಿಳಿಸಿದ್ದಾರೆ.
ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಘನತ್ಯಾಜ್ಯ ವಿಲೇವಾರಿ ಯೋಜನೆಗೆ 30 ವರ್ಷಗಳ ಅವಧಿಯ ಗುತ್ತಿಗೆ ನೀಡಿರುವುದು ಮೂಲಸೌಕರ್ಯ ಅಭಿವೃದ್ಧಿ, ಸಂಸ್ಕರಣಾ ಘಟಕಗಳ ನಿರ್ಮಾಣ ಹಾಗೂ ದೀರ್ಘಾವಧಿಯ ಹೂಡಿಕೆಯನ್ನು ಗಮನದಲ್ಲಿಟ್ಟುಕೊಂಡು. ಕಸ ಸಂಗ್ರಹಣೆ, ಸಾಗಣೆ ಹಾಗೂ ವೈಜ್ಞಾನಿಕ ವಿಲೇವಾರಿಯ ಜವಾಬ್ಧಾರಿಯನ್ನು ಗುತ್ತಿಗೆ ಪಡೆಯುವ ಸಂಸ್ಥೆ ನಿರ್ವಹಿಸಲಿದೆ. ಪೌರಕಾರ್ಮಿಕರ ವೇತನವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರತ್ಯೇಕವಾಗಿ ಭರಿಸುತ್ತದೆ ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 6 ಸಾವಿರ ಟನ್ ಕಸ ಉತ್ಪತ್ತಿಯಾಗುತ್ತಿದ್ದು, ಅದನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ವಿದ್ಯುತ್ ಉತ್ಪಾದನೆ ಹಾಗೂ ಸಂಪನ್ಮೂಲ ಮರುಬಳಕೆಯ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ಕೇಂದ್ರ ಸರಕಾರದ ನಿಯಮಾವಳಿಗಳು ಹಾಗೂ ಒಪ್ಪಂದದ ಷರತ್ತುಗಳ ಅನ್ವಯವೇ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು.
ಇದೀಗ ಚಾಲ್ತಿಯಲ್ಲಿರುವ ವ್ಯವಸ್ಥೆಯಲ್ಲಿ ಪ್ರತಿ ಟನ್ ಕಸ ನಿರ್ವಹಣೆಗೆ ಹೆಚ್ಚು ವೆಚ್ಚವಾಗುತ್ತಿದೆ. ಹೊಸ ವ್ಯವಸ್ಥೆಯಲ್ಲಿ ವೆಚ್ಚ ಕಡಿಮೆಯಾಗಲಿದ್ದು, ದೀರ್ಘಾವಧಿಯಲ್ಲಿ ಸರಕಾರಕ್ಕೆ ಸಾವಿರಾರು ಕೋಟಿ ರೂ. ಉಳಿತಾಯವಾಗಲಿದೆ. ಇದರಲ್ಲಿ ಯಾವುದೇ ರೀತಿಯ ಲೂಟಿ ನಡೆದಿಲ್ಲ. ಬದಲಿಗೆ ಸಾರ್ವಜನಿಕ ಹಣದ ಉಳಿತಾಯಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಆಧಾರವಿಲ್ಲದೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿ ನಾಯಕರ ಬಳಿ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗಳಿಗೆ ಸಲ್ಲಿಸಲಿ. ಈಡಿ, ಐಟಿ ಸೇರಿದಂತೆ ಎಲ್ಲ ತನಿಖಾ ಸಂಸ್ಥೆಗಳು ಕೇಂದ್ರ ಸರಕಾರದ ಅಧೀನದಲ್ಲಿವೆ. ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಸತ್ಯವನ್ನು ಹೊರತರಲಿ ಎಂದು ಸವಾಲು ಹಾಕಿದರು.
2022ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ದಂಡ ವಿಧಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿತ್ತು. ಆ ಅವಧಿಯ ಜವಾಬ್ಧಾರಿಯ ಕುರಿತು ಉತ್ತರ ನೀಡುವ ಬದಲು ಪ್ರಸ್ತುತ ಸರಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಬಿಜೆಪಿ ನಾಯಕರು ನೀಟ್ ಪರೀಕ್ಷೆ, ಸಿಬಿಎಸ್‍ಇ ಸಮಸ್ಯೆಗಳು, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಜನ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮೌನ ವಹಿಸಿ, ಕಾಂಗ್ರೆಸ್ ವಿರುದ್ಧ ಆರೋಪ ಮಾಡುವುದನ್ನೇ ರಾಜಕೀಯವಾಗಿಸಿಕೊಂಡಿದ್ದಾರೆ. ಬಿಜೆಪಿ ಜವಾಬ್ಧಾರಿಯುತ ವಿರೋಧ ಪಕ್ಷದ ಪಾತ್ರ ನಿರ್ವಹಿಸುವ ಬದಲು ಸುಳ್ಳು ಆರೋಪಗಳ ಮೂಲಕ ರಾಜಕಾರಣ ಮಾಡುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ. ಬೆಂಗಳೂರಿನ ಅಭಿವೃದ್ಧಿ ಮತ್ತು ಸ್ವಚ್ಛತಾ ನಿರ್ವಹಣೆಗೆ ಸರಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್.ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.