ಮುಂದಿನ ವರ್ಷದಿಂದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ಜಾರಿ : ಮಧು ಬಂಗಾರಪ್ಪ
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಹೀಗಾಗಿ ಶಾಲಾ ಮಕ್ಕಳಿಗೆ ಮೌಲ್ಯ ಶಿಕ್ಷಣವನ್ನು ನೀಡಲಾಗುವುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳನ್ನು ಸಿದ್ದಪಡಿಸಲಾಗಿದ್ದು, ಅವು ಶೈಕ್ಷಣಿಕ ಚಟುವಟಿಕೆಯ ಭಾಗವಾಗಲಿವೆ ಎಂದು ಅವರು ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಮೌಲ್ಯ ಶಿಕ್ಷಣ'ದ ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಖರಗ್‍ಪುರ್‌ಗೆ ಪ್ರವೇಶಕ್ಕೆ ಅರ್ಹತೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿ ಸಂಕೇತ್ ರಾಜ್ ಅವರಿಗೆ 1 ಲಕ್ಷ ರೂ. ಪ್ರೋತ್ಸಾಹಧನದ ಚೆಕ್ ಅನ್ನು ನೀಡಲಾಯಿತು. ಜೊತೆಗೆ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನೂ ಗೌರವಿಸಲಾಯಿತು.