ಬೆಂಗಳೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ; ವಿವಿಧೆಡೆ ಸಂಗ್ರಹಿಸಲಾಗಿದ್ದ 1.20 ಕೋಟಿ ಮೌಲ್ಯದ ಮಾದಕ ವಸ್ತು ವಶ
58 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂಬುದು ಸತ್ಯಕ್ಕೆ ದೂರ : ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧೆಡೆ ದಾಸ್ತಾನು ಮಾಡಲಾಗಿದ್ದ ಸುಮಾರು 1.20 ಕೋಟಿ ರೂ. ಮೌಲ್ಯದ ಮಾದಕ ಪದಾರ್ಥಗಳನ್ನು ಮಹಾರಾಷ್ಟ್ರದ ಕೊಂಕಣ್ ವಿಭಾಗದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ(ಎಟಿಎನ್‍ಎಫ್) ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರ ಪೊಲೀಸರ ಸಹಕಾರದೊಂದಿಗೆ ನಗರದ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಮಹಾರಾಷ್ಟ್ರ ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡು ಸುಮಾರು 1.20 ಕೋಟಿ ರೂ. ಮೌಲ್ಯದ 4.1 ಕೆ.ಜಿ. ಘನ ರೂಪದ ಎಂಡಿಎಂಎ ಮತ್ತು 17 ಕೆ.ಜಿ. ದ್ರವ ರೂಪದ ಎಂಡಿಎಂ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು, ಈ ಸಂಬಂಧ ರವಿವಾರ ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಡ್ರಗ್ಸ್ ದಂಧೆಯ ವಿರುದ್ಧ ಅಕ್ಟೋಬರ್, ನವೆಂಬರ್ ತಿಂಗಳಿಂದ ಪೊಲೀಸರು ರಾಜ್ಯಾದ್ಯಂತ ಹೆಚ್ಚಿನ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ. ಡಿ.27ರಂದು ಮಹಾರಾಷ್ಟ್ರ ಪೊಲೀಸರು ಮುಂಬೈನಲ್ಲಿ ಸಿಕ್ಕ ಆರೋಪಿಯ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಮತ್ತೊಬ್ಬ ಆರೋಪಿಯೊಬ್ಬನನ್ನು ಹಿಡಿದಿದ್ದು, ಮಹಾರಾಷ್ಟ್ರ ಪೊಲೀಸರು ಮತ್ತು ಬೆಂಗಳೂರು ನಗರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಈ ಆರೋಪಿಯು ಡ್ರಗ್ಸ್ ತಯಾರಿಸಲು ಬೇಕಾದ ಮೆಫೆಡ್ರಿನ್ ಎಂಬ ಕೆಮಿಕಲ್ ಸಂಗ್ರಹಿಸಿಟ್ಟುಕೊಂಡಿದ್ದ. ಮುಂಬೈನಲ್ಲಿ ಸಿಕ್ಕಿದ್ದ ಆರೋಪಿಯು ನೀಡಿದ ಸುಳಿವಿನ ಮೇರೆಗೆ ಬೆಂಗಳೂರು ನಗರ ಪೊಲೀಸ್, ಮುಂಬೈ ಪೊಲೀಸ್, ಎನ್‍ಸಿಬಿ ಹಾಗೂ ಇತರೆ ತನಿಖಾಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸರು ಏನು ಕ್ರಮ ಕೈಗೊಂಡಿಲ್ಲ ಎಂಬ ಮಾತುಗಳು ಸರಿಯಲ್ಲ ಎಂದು ಜಿ.ಪರಮೇಶ್ವರ್ ಹೇಳಿದರು.
‘ಮೂರು ಡ್ರಗ್ಸ್ ಕಾರ್ಖಾನೆಗಳಿತ್ತು ಎಂಬುದು ಸುಳ್ಳು..’ :
ಬೆಂಗಳೂರಿನ ಮೂರು ಕಡೆಗಳಲ್ಲಿ ಡ್ರಗ್ಸ್ ಕಾರ್ಖಾನೆಗಳಿತ್ತು ಎಂಬುದು ಸುಳ್ಳು. ಕಾರ್ಯಾಚರಣೆ ವೇಳೆ ನಮ್ಮ ಡಿಸಿಪಿಯವರು ಮಹಾರಾಷ್ಟ್ರ ಪೊಲೀಸರೊಂದಿಗೆ ಇದ್ದರು. ಡ್ರಗ್ಸ್ ದಂಧೆಯ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತವಾಗಿ ಹೋರಾಟ ನಡೆಸಲಾಗುತ್ತಿದೆ. ಡ್ರಗ್ಸ್ ಜಾಲದ ವಿರುದ್ಧ ಅಕ್ಟೋಬರ್‍ನಿಂದ ಹೆಚ್ಚಿನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮುಂದೆ ಇಂತಹ ಘಟನೆ ಆಗಬಾರದು. ಡಿಸಿಪಿ ಆಗಲಿ, ಎಸಿಪಿ ಅಥವಾ ಸ್ಥಳೀಯ ಅಧಿಕಾರಿಗಳು ಯಾರೇ ಇರಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಅಮಾನತು ಅಷ್ಟೇ ಅಲ್ಲದೇ ಬೇರೆ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಜಿ.ಪರಮೇಶ್ವರ್ ತಿಳಿಸಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರುಗಳಾದ ರಮೇಶ್ ಬಾನೋಥ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಉಪಸ್ಥಿತರಿದ್ದರು.
58 ಕೋಟಿ ಮೌಲ್ಯದ ಡ್ರಗ್ಸ್ ಎಂಬುದು ಸತ್ಯಕ್ಕೆ ದೂರ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
ಮಹಾರಾಷ್ಟ್ರ ಪೊಲೀಸರು 58 ಕೋಟಿ ರೂ. ಮೌಲ್ಯದ ಡ್ರಗ್ಸ್ ಹಿಡಿದಿದ್ದಾರೆ ಎಂದು ಎಲ್ಲೆಡೆ ಸುದ್ದಿಯಾಗುತ್ತಿದೆ. ಇದು ಸತ್ಯಕ್ಕೆ ದೂರವಾದ ಮಾಹಿತಿ. ಪತ್ತೆಯಾಗಿರುವ ಒಟ್ಟು 4 ಕೆ.ಜಿ. ಮಾದಕ ವಸ್ತುಗಳಿಗೆ 1.20 ಕೋಟಿ ರೂ. ಮೌಲ್ಯವಾಗುತ್ತದೆ. ಅನೇಕ ಸಂದರ್ಭಗಳಲ್ಲಿ ನಮ್ಮ ಪೊಲೀಸರು, ಇಲ್ಲಿ ಸಿಕ್ಕ ಆರೋಪಿಗಳು ನೀಡಿರುವ ಮಾಹಿತಿ ಆಧರಿಸಿ ಬೇರೆ ರಾಜ್ಯಗಳಲ್ಲಿ ಕಾರ್ಯಾಚರಣೆ ಕೈಗೊಂಡಿರುತ್ತೇವೆ. ಈಗಾಗಲೇ ಬೇರೆ, ಬೇರೆ ಪ್ರಕರಣಗಳಲ್ಲಿ ನಾಲ್ಕು ಪೊಲೀಸರ ತಂಡಗಳು ಕಾಯುತ್ತಿವೆ. ಆಗ ಅಲ್ಲಿನ ಪೊಲೀಸರ ವೈಫಲ್ಯ ಎಂದು ಹೇಳಲಾಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಗೃಹ ಇಲಾಖೆ ಸಂಪೂರ್ಣ ವಿಫಲ: ಬಿಜೆಪಿ ಆರೋಪ
ಈ ಕಾರ್ಯಾಚರಣೆ ಸಂಬಂಧ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ ನಾರಾಯಣ, ರಾಜ್ಯದಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳು ವ್ಯವಸ್ಥಿತವಾಗಿ ತಯಾರಾಗಿ, ಸಾಗಣೆ ಹಾಗೂ ಮಾರಾಟವಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಇದು ಸಣ್ಣ ಮಟ್ಟದ ಸಮಸ್ಯೆಯಲ್ಲ. ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಾಲ ರಾಜ್ಯಾದ್ಯಂತ ವ್ಯಾಪಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಪೊಲೀಸರು ಬಂದು ಕಲಬುರಗಿಯಲ್ಲಿ, ಮೈಸೂರಿನಲ್ಲಿ ದಾಳಿ ನಡೆಸುತ್ತಿರುವುದು ನಮ್ಮ ಗೃಹ ಇಲಾಖೆಯ ಅಸಮರ್ಥತೆಯನ್ನು ತೋರಿಸುತ್ತದೆ. ಮಹಾರಾಷ್ಟ್ರ ಪೊಲೀಸರಿಗೆ ಗೊತ್ತಾಗುವ ವಿಷಯ ನಮ್ಮ ಪೊಲೀಸರಿಗೆ, ಸರಕಾರಕ್ಕೆ ಗೊತ್ತಾಗುವುದಿಲ್ಲವೇ? ಎಂದು ಸಿ.ಎನ್.ಅಶ್ವತ್ ನಾರಾಯಣ ಪ್ರಶ್ನಿಸಿದರು.
ಪೊಲೀಸ್ ಇಲಾಖೆ, ಡಿಜಿಪಿ, ಗೃಹ ಸಚಿವರು ಯಾವ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ? ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳು ಯಾವಾಗ ಮುಖ್ಯಮಂತ್ರಿ ಕುರ್ಚಿ ಏರುತ್ತೇನೋ ಎಂದು ಕಾರ್ಯತಂತ್ರಗಳನ್ನು ಹೆಣೆಯುತ್ತಿದ್ದಾರೆ. ಪೊಲೀಸ್ ಇಲಾಖೆ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಇಲಾಖೆಯನ್ನೇ ಮಾರಾಟಕ್ಕೆ ಇಟ್ಟುಬಿಟ್ಟಿದ್ದಾರೆ ಎಂದು ಅಶ್ವತ್ಥ ನಾರಾಯಣ ಆರೋಪಿಸಿದರು.
ಕರ್ನಾಟಕದ ರಾಜಧಾನಿ ಬೆಂಗಳೂರು ಈಗ ‘ಡ್ರಗ್ಸ್ ಹಬ್’, ‘ಉಡ್ತಾ ಬೆಂಗಳೂರು’ ಆಗಿ ಮಾರ್ಪಡುತ್ತಿರುವುದು ಆತಂಕಕಾರಿ ಮಾತ್ರವಲ್ಲ, ಕಾನೂನು ಸುವ್ಯವಸ್ಥೆಯ ಕುಸಿತದ ದುರಂತ ಸಾಕ್ಷ್ಯ! ಮೈಸೂರಿನ ಬೆನ್ನಲ್ಲೇ ಈಗ ಬೆಂಗಳೂರಿನಲ್ಲೂ ಮೂರು ಡ್ರಗ್ ಕಾರ್ಖಾನೆಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದರೆ ನಮ್ಮ ರಾಜ್ಯದ ಗುಪ್ತಚರ ಇಲಾಖೆ ಮತ್ತು ಪೊಲೀಸ್ ವ್ಯವಸ್ಥೆ ನಿದ್ರಿಸುತ್ತಿದೆಯೇ? ಹೊರರಾಜ್ಯದ ಪೊಲೀಸರು ಬಂದು ನಮ್ಮ ರಾಜ್ಯದ ಡ್ರಗ್ ಮಾಫಿಯಾ ಬಯಲಿಗೆಳೆಯಬೇಕಾದ ಅನಿವಾರ್ಯತೆ ಬಂದಿರುವುದು ಈ ಸರಕಾರದ ವೈಫಲ್ಯ ಮಾತ್ರವಲ್ಲ, ನಾಚಿಕೆಗೇಡಿನ ಸಂಗತಿ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ