ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ: ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಹೇಶ್ ಶೆಟ್ಟಿ ತಿಮರೋಡಿ
ಬೆಂಗಳೂರು: ಶಸ್ತ್ರಾಸ್ತ್ರ ಕಾಯ್ದೆಯಡಿ ತಮ್ಮ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, 2025ರ ಆಗಸ್ಟ್ 26ರಂದು ನ್ಯಾಯಾಲಯದ ವಾರಂಟ್ ಪಡೆದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಶೋಧ ನಡೆಸಿದ್ದರು. ಈ ವೇಳೆ ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಈ ಬಗ್ಗೆ ತನಿಖಾ ತಂಡವು ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ನಂತರ ಎಸ್‌ಐಟಿ ಅಧಿಕಾರಿಗಳು ಸೆಪ್ಟೆಂಬರ್ 16ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ, ತಿಮರೋಡಿ ತಮ್ಮ ಮನೆಯಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮುಂದಿನ ತನಿಖೆ ನಡೆಸಬೇಕು ಎಂದು ಕೋರಿದ್ದರು.
ಈ ದೂರಿನ ಆಧಾರದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರಿಂದ, ಎಫ್‌ಐಆರ್ ರದ್ದು ಕೋರಿ ತಿಮರೋಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ನ್ಯಾಯಪೀಠದ ವಿಚಾರಣೆಗೆ ನಿಗದಿಯಾಗಬೇಕಿದೆ.