ಎಚ್.ಡಿ. ಕುಮಾರಸ್ವಾಮಿ-ಚಂದ್ರಶೇಖರ್ ಪ್ರಕರಣದ ಸಂಧಾನ ವಿಫಲ; ಹೈಕೋರ್ಟ್‌ಗೆ ಮಾಹಿತಿ
ಎಂ. ಚಂದ್ರಶೇಖರ್ - ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಮತ್ತವರ ಕುಟುಂಬದವರಿಗೆ ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ರಾಜಿ ಸಂಧಾನ ವಿಫಲವಾಗಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.
ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು, ʼರಾಜಿ ಸಂಧಾನ ಪ್ರಯತ್ನ ವಿಫಲವಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಾಗಿದ್ದರೆ ಮೆರಿಟ್ ಆಧಾರದಲ್ಲಿ ವಿಚಾರಣೆ ಮುಂದುವರಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿತು.
ಈ ಮೊದಲು ಪ್ರಕರಣದ ರಾಜಿ ಸಂಧಾನಕ್ಕಾಗಿ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್. ಓಕ್ ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿತ್ತು.