ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Photo: X/@DKShivakumar)

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಯು ತಮಿಳುನಾಡಿನ ಹಿತಾಸಕ್ತಿ ಹಾಗೂ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಸಮಾನವಾಗಿ ರಕ್ಷಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಇಂಡಿಯಾ ಟುಡೇ ರೌಂಡ್‍ಟೇಬಲ್-ಕರ್ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಲ್ಲಿ ಶೇಖರಣೆಯಾಗುವ ಶೇ.95ರಷ್ಟು ನೀರು ತಮಿಳುನಾಡಿಗೆ ಹರಿಯುತ್ತದೆ. ಇದು ಆ ರಾಜ್ಯಕ್ಕೆ ಜೀವರಕ್ಷಕವಾಗಲಿದೆ. ಪ್ರವಾಹದ ಸಂದರ್ಭದಲ್ಲಿ ವ್ಯರ್ಥವಾಗಿ ಸಮುದ್ರಕ್ಕೆ ಹರಿದುಹೋಗುವ ನೀರನ್ನು ಸಂಗ್ರಹಿಸಲು ಈ ಯೋಜನೆ ಸಹಕಾರಿಯಾಗಲಿದೆ. ಯೋಜನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.

ಕೆಆರ್ ಎಸ್ ಜಲಾಶಯದ ನೀರನ್ನು ಕರ್ನಾಟಕವು ನೀರಾವರಿಗೆ ಬಳಸಿಕೊಳ್ಳಲು ಸಾಧ್ಯವಿಲ್ಲ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕಾಗಿ ನಿಗದಿಪಡಿಸಿರುವ 4.75 ಟಿಎಂಸಿ ನೀರನ್ನು ಮಾತ್ರ ಬಳಸಿಕೊಳ್ಳಲಾಗುತ್ತದೆ. ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ಬಿಡುಗಡೆ ಮಾಡಬೇಕಾದ 177.25 ಟಿಎಂಸಿ ಕಾವೇರಿ ನೀರಿನ ಕುರಿತ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಸಂಪೂರ್ಣವಾಗಿ ಗೌರವಿಸಿ, ಪಾಲಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ತುಂಗಭದ್ರಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸಹಿತ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸಕಾರಾತ್ಮಕ ಮಾತುಕತೆಯ ಮೂಲಕ ಒಮ್ಮತದ ತೀರ್ಮಾನಕ್ಕೆ ಬಂದಿದ್ದೇವೆ. ನ್ಯಾಯಾಲಯಗಳಲ್ಲಿ ಎಲ್ಲ ಸಮಸ್ಯೆಗಳು ಬಗೆಹರಿಯುವುದಿಲ್ಲ. ಕೂತು ಚರ್ಚೆ ಮಾಡಿದರೆ ಪರಿಹಾರ ಸಿಗುತ್ತದೆ. ಇದು ನಮ್ಮ ಆದ್ಯತೆ. ಈ ಮಾದರಿಯನ್ನು ಮೇಕೆದಾಟು ವಿಚಾರದಲ್ಲೂ ಅನುಸರಿಸಬಹುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor