×
Ad

ರಾಜ್ಯ ಮಹಿಳಾ ಸರಕಾರಿ ನೌಕರರಿಗೆ ಋತುಚಕ್ರ ರಜೆ ಮಂಜೂರು : ಸರಕಾರ ಆದೇಶ

Update: 2025-12-02 20:09 IST

ಬೆಂಗಳೂರು : ರಾಜ್ಯ ಮಹಿಳಾ ಸರಕಾರಿ ನೌಕರರ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರಕಾರಿ ನೌಕರರಿಗೂ ಕಲ್ಪಿಸಲು ತೀರ್ಮಾನಿಸಿ ತಕ್ಷಣದಿಂದಲೆ ಜಾರಿಗೆ ಬರುವಂತೆ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

18-52 ವಯಸ್ಸಿನ ಮಹಿಳಾ ಸರಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೆ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

ಈ ರಜೆಯನ್ನು ರಜೆ ಅಥವಾ ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು ಹಾಗೂ ಋತುಚಕ್ರ ರಜೆಯನ್ನು ಬೇರೆ ಯಾವುದೆ ರಜೆಯೊಂದಿಗೆ ಸಂಯೋಜಿಸುವಂತಿಲ್ಲ ಎಂದು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯ ಅನ್ವಯವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News