×
Ad

ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-06-26 15:20 IST

Photo :x/@DKShivakumar

ಬೆಂಗಳೂರು : "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತೀ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ" ಎಂದು ತಿಳಿಸಿದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, "ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಬಳಿಕ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ" ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು:

ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News