ನವೆಂಬರ್ ಅಂತ್ಯಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣ : ಸಚಿವ ಚಲುವರಾಯಸ್ವಾಮಿ
ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ನವೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಶುಕ್ರವಾರ ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯ ಮೂಲ ಅಂದಾಜು 12,340 ಕೋಟಿ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, 21,473 ಕೋಟಿ ರೂ.ಗಳ ಮೊತ್ತದ ಪುನರ್ ಪರಿಷ್ಕೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 2026-27ನೇ ಸಾಲಿನಲ್ಲಿ 1,042 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.
ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಒಟ್ಠಾರೆ 29.90 ಟಿ.ಎಂ.ಸಿ ನೀರನ್ನು ಬಳಸಿಕೊಂಡು ಚಿತ್ರದುರ್ಗ ಹಾಗೂ ತುಮಕೂರು ಶಾಖಾ ಕಾಲುವೆಗಳ ಮೂಲಕ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ 2,25,515 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳನ್ನು ಭರ್ತಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದ್ದು, ಯೋಜನೆ ಪೂರ್ಣಗೊಂಡರೆ 2,25,515 ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.