×
Ad

ಕೋವಿಡ್ ಉಪತಳಿ ಅಷ್ಟೇನು ಅಪಾಯಕಾರಿಯಲ್ಲ, ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್

Update: 2025-05-25 18:59 IST

 ದಿನೇಶ್ ಗುಂಡೂರಾವ್

ಬೆಂಗಳೂರು : ಕೋವಿಡ್ ಸೋಂಕಿನ ಉಪತಳಿ ಅಷ್ಟೇನು ಅಪಾಯಕಾರಿಯಲ್ಲ. ಹೀಗಾಗಿ ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ. ಮುಂದಿನ ಮೂರಾಲ್ಕು ದಿನಗಳ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿಯಿಂದ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿಗಳು ಇಲ್ಲ. ಯಾರೂ ಗಂಭೀರ ಪರಿಸ್ಥಿತಿಗೆ ಹೋಗಿರುವ ಉದಾಹರಣೆಗಳಿಲ್ಲ, ಸಿಂಗಾಪುರ ಹಾಗೂ ಇತರ ದೇಶಗಳಲ್ಲಿ ಕೋವಿಡ್ ಹಬ್ಬಿದೆ. ಅದರಿಂದ ಆತಂಕದ ವಾತಾವರಣವಿಲ್ಲ, ಪ್ರವಾಸ ಮಾಡಬಾರದು ಎಂದು ಯಾರೂ ನಿರ್ಬಂಧ ಹೇರಿಲ್ಲ. ಮೊದಲ ಮತ್ತು ಎರಡನೇ ಹಂತದ ಕೋವಿಡ್ ಸ್ಥಿತಿ ಈಗಿಲ್ಲ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವಿರುತ್ತೇವೆ ಎಂದು ಹೇಳಿದರು.

ಕೇಂದ್ರ ಸರಕಾರ ರಾಜ್ಯದ ಆರೋಗ್ಯ ಇಲಾಖಾಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ. ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸದ್ಯಕ್ಕೆ ನೀಡಿರುವ ಮಾರ್ಗಸೂಚಿಗಳೇ ಸಾಕು. ವಿಶೇಷ ಕ್ರಮಗಳ ಅಗತ್ಯ ಇಲ್ಲ. ಜನ ವಿಶೇಷ ನಿಗಾ ವಹಿಸುವ ರಿಸ್ಕ್ ಕೆಟಗರಿಯವರು ಮಾಸ್ಕ್ ಧರಿಸಿ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.

ಶಾಲಾ-ಕಾಲೇಜುಗಳಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಮೂರಾಲ್ಕು ದಿನ ಪರಿಶೀಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಯಾವುದೇ ಆತಂಕದ ವಾತಾವರಣವಿಲ್ಲ. ಕೋವಿಡ್ ಪರೀಕ್ಷೆಗೆ ಆದೇಶಿಸಲಾಗಿದೆ. ಅಗತ್ಯವಾದ ಟೆಸ್ಟ್ ಕಿಟ್‍ಗಳು ನಾಳೆ, ನಾಡಿದ್ದರೊಳಗೆ ಬರುತ್ತವೆ. ಸಾರಿ ಹಾಗೂ ಐಎಲ್‍ಐ ಪ್ರಕರಣಗಳು, ವಯೋವೃದ್ಧರಿಗೆ ಖಾಸಗಿ, ಸರಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಎರಡು-ಮೂರು ದಿನ ದೇಶ ಹಾಗೂ ರಾಜ್ಯದಲ್ಲಿ ಸೋಂಕಿನ ಹರಡುವಿಕೆಯ ಬಗ್ಗೆ ನಿಗಾ ವಹಿಸಲಾಗಿದೆ. ಕೋವಿಡ್ ನಿಯಂತ್ರಣ ಸಲಹಾ ಸಮಿತಿ ಪ್ರತಿವಾರ ಸಭೆ ಸೇರಿ ಚರ್ಚೆ ನಡೆಸುವಂತೆ ಸೂಚಿಸಲಾಗಿದೆ. ಸೋಂಕಿನಿಂದ ನಿನ್ನೆ ಒಬ್ಬರು ಮೃತಪಟ್ಟಿರುವುದು ಖಚಿತವಾಗಿದೆ. ಅವರಿಗೆ 84 ವರ್ಷವಾಗಿತ್ತು. ಒಂದು ವರ್ಷದಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಹಿಪ್ ರಿಪ್ಲೇಸ್‍ಮೆಂಟ್, ಹೃದ್ರೋಗ, ಕ್ಷಯ ರೋಗವೂ ಇತ್ತು. ನಾನಾ ಆರೋಗ್ಯ ಸಮಸ್ಯೆಗಳಿದ್ದವು. ಕೋವಿಡ್ ಸೋಂಕಿನಿಂದಲೇ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಆಡಿಟ್ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಸೋಂಕನ್ನು ಸರಕಾರ ನಿರ್ಲಕ್ಷ್ಯ ಮಾಡಿಲ್ಲ, ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಏಕಾಏಕಿ ಲಾಕ್‍ಡೌನ್ ಮಾಡಲು ಸಾಧ್ಯವಿಲ್ಲ. ಎಲ್ಲ ಬೆಳವಣಿಗೆಗಳ ಮೇಲೆ ನಿಗಾ ವಹಿಸಲಾಗಿದೆ. ಅಧಿಕಾರಿಗಳು ಕೇಂದ್ರ ಸರಕಾರದ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಸಮರ್ಥಿಸಿಕೊಂಡರು

ಖಾಸಗಿ ಆಸ್ಪತ್ರೆಗಳು ಸೋಂಕಿನ ಪರೀಕ್ಷೆ ಬಗ್ಗೆ ಸರಕಾರಕ್ಕೆ ಮಾಹಿತಿ ನೀಡಲೇಬೇಕು. ಪರೀಕ್ಷಾ ವೆಚ್ಚ ನಿರ್ಧರ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮೊಂದಿಗೆ ಈ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಕಾಲಕಾಲಕ್ಕೆ ಮಾಹಿತಿ ಒದಗಿಸಬೇಕು ಮತ್ತು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹಿಂದು-ಮುಂದು ನೋಡಬಾರದು ಎಂದು ಆದೇಶಿಸಿದ್ದಾರೆ ಎಂದು ಅವರು ತಿಳಿಸಿದರು.

‘ಒಂದು ವಾರದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರಲ್ಲಿ ಕೊಂಚ ಏರಿಕೆಯಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗಳಲ್ಲಿ ದಾಖಲಾದವರನ್ನ ಕಡ್ಡಾಯವಾಗಿ ಕೋವಿಡ್ ಟೆಸ್ಟ್‌ ಗೆ ಸೂಚಿಸಲಾಗಿದೆ. ಅಗತ್ಯ ಟೆಸ್ಟಿಂಗ್ ಕಿಟ್‍ಗಳನ್ನ ತೆಗೆದಿರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಾಣಂತಿಯರು, ಗರ್ಭೀಣಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಉತ್ತಮ. ಪಾಸಿಟಿವ್ ಹೊಂದಿದ 35 ಜನರಲ್ಲಿ ಕೋವಿಡ್ ಗಂಭೀರವಾಗಿಲ್ಲ. ಸೌಮ್ಯ ಸ್ವಭಾವದ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಸಾರ್ವಜನಿಕರು ಕೋವಿಡ್ ಬಂತು ಎಂದು ಆತಂಕಗೊಳ್ಳದೇ ತಮ್ಮ ಸಹಜ ಜೀವನ ನಡೆಸಬಹುದು’

-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News