×
Ad

ನೆರೆಪೀಡಿತ ಪ್ರದೇಶಗಳಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ; ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Update: 2023-07-08 17:05 IST

ಕಾರವಾರ, ಜುಲೈ 08: ಕರಾವಳಿ ಭಾಗದ ನೆರೆಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಚಿವ ಕೃಷ್ಣಭೈರೇಗೌಡ ಅವರು ಕುಮಟಾ ತಾಲ್ಲೂಕಿನ ಪೋಸ್ಟ್ ಬೆಟ್ಟುಳಿಯಲ್ಲಿ ಎರಡು ದಿನಗಳ ಹಿಂದೆ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಸತೀಶ ನಾಯ್ಕ ಮತ್ತು ಉಲ್ಲಾಸ ಗಾವಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ತಲಾ 5 ಲಕ್ಷ ಮೊತ್ತದ ಪರಿಹಾರ ಧನದ ಚೆಕ್ ನೀಡಿದರು.

ಬೆಟ್ಕುಳಿ ಗ್ರಾಮದಲ್ಲಿ ಮಳೆಯಿಂದಾಗಿ ಭಾರೀ ಅನಾಹುತವಾಗಿದ್ದು ಈ ಬಗ್ಗೆ ಅಧಿಕಾರಿಗಳು ಹಾಗೂ ಸಂತ್ರಸ್ತರಿಂದ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಪಡೆದರು. ಹಾಗೆಯೇ ಕರಾವಳಿ ಕರ್ನಾಟಕ ಭಾಗದ ಮಳೆ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸದ್ಯಕ್ಕೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಪಡೆಯನ್ನೂ ಸ್ಥಳದಲ್ಲಿ ನಿಯೋಜಿಸಲಾಗಿದೆ. ಎಂತಹದೇ ಪ್ರಾಕೃತಿಕ ವಿಕೋಪ ಉಂಟಾದರೂ ವಿಪತ್ತು ನಿರ್ವಹಣಾ ಪಡೆಯನ್ನು ಸಂಪರ್ಕಿಸಿ ಸಹಾಯ ಪಡೆಯಬೇಕು ಎಂದು ಸಚಿವರು ಸೂಚಿಸಿದರು.

ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ನೆರೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಶೀಘ್ರದಲ್ಲಿ 5 ಲಕ್ಷ ಪರಿಹಾರ ನೀಡಬೇಕು. ಜನರ ಸಮಸ್ಯೆಗಳಿಗೆ ತುರ್ತು ಸ್ಪಂದಿಸಬೇಕು ಹಾಗೂ ನೆರೆ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.

ಮಳೆ ಅನಾಹುತದ ಬಗ್ಗೆ ಪತ್ರಕರ್ತರಿಗೆ ಮಾಹಿತಿ ನೀಡಿರುವ ಸಚಿವ ಕೃಷ್ಣಭೈರೇಗೌಡ, “ಮಳೆಯಿಂದ ರಾಜ್ಯದಲ್ಲಿ ಈವರೆಗೆ 21 ಜನ ಜೀವ ಕಳೆದುಕೊಂಡಿದ್ದು, ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರ ತೆರೆಯಲಾಗುತ್ತಿದೆ. ಸರ್ಕಾರ ಸಂತ್ರಸ್ತರಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ. ಕೇಂದ್ರದ ನಾಲ್ಕು ಎನ್.ಡಿ.ಆರ್.ಎಫ್, ರಾಜ್ಯದ ಐದು ಎಸ್.ಡಿ.ಆರ್.ಎಫ್. ತುಕಡಿ ಪ್ರಕೃತಿ ವಿಕೋಪ ಪರಿಹಾರ ಕಾರ್ಯಕ್ಕೆ ಸನ್ನದ್ಧವಾಗಿದೆ” ಎಂದು ಮಾಹಿತಿ ನೀಡಿದರು.

ನೆರೆಪೀಡಿತ ಪ್ರದೇಶಗಳ ಪರಿಶೀಲನೆ ವೇಳೆ ಮೋಡ ಬಿತ್ತನೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಜುಲೈನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ವರದಿ ನೀಡಿತ್ತು. ಅದರಂತೆ ಸರಾಸರಿಗಿಂತಲೂ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಮೋಡ ಭಿತ್ತನೆಯ ಚಿಂತನೆ ಸದ್ಯಕ್ಕಿಲ್ಲ.” ಎಂದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News