‘ವಿದ್ಯಾರ್ಥಿ ಸಹಾಯಹಸ್ತ ಯೋಜನೆ’ ಕುರಿತು ಆಕ್ಷೇಪಣೆಗೆ ಆಹ್ವಾನ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಗ್ರಾಮೀಣ ಸರಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಿಗೆ ಸೇರುವಾಗ ಶೇ.7.5ರಷ್ಟು ವಿಶೇಷ ಮೀಸಲಾತಿ ನೀಡುವ ‘ವಿದ್ಯಾರ್ಥಿ ಸಹಾಯಹಸ್ತ’ ಯೋಜನೆಯ ಕುರಿತು ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಅವರು, ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಿಗೆ ಸೇರುವಾಗ ಶೇ.7.5ರಷ್ಟು ವಿಶೇಷ ಮೀಸಲಾತಿ ನೀಡಲು ‘ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಸರಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ) ನಿಯಮಗಳು, 2006ಕ್ಕೆ ತಿದ್ದುಪಡಿ ತಂದು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ತಿದ್ದುಪಡಿ ಅಧಿಸೂಚನೆಯನ್ನು ‘ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ(ತಿದ್ದುಪಡಿ) ನಿಯಮಗಳು, 2026’ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದುವರೆಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ ಶೇ.15ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ ಇನ್ನುಮುಂದೆ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯಾವುದೇ (ಖಾಸಗಿ ಸೇರಿದಂತೆ) ಶಿಕ್ಷಣ ಸಂಸ್ಥೆಗಳು, ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ನೀಡಲಾಗುತ್ತದೆ. ಗ್ರಾಮೀಣ ಭಾಗದ ಸರಕಾರಿ ಶಾಲೆಗಳನ್ನು ಉಳಿಸುವ ಮತ್ತು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ತೀರ್ಮಾನ ಎಂದು ತಿಳಿಸಿದ್ದಾರೆ.
ನಮ್ಮ ಸರಕಾರ ಈ ತೀರ್ಮಾನವನ್ನು ತೆಗೆದುಕೊಂಡಿರುವ ಈ ಹೊತ್ತಿನಲ್ಲಿ ಬಂಗಾರಪ್ಪ ಅವರನ್ನು ನಾನು ಬಹಳವಾಗಿ ನೆನಪಿಸಿಕೊಳ್ಳುತ್ತೇನೆ. ಏಕೆಂದರೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ದೊರೆಯುವಂತೆ ಮಾಡಿದವರೇ ಎಸ್.ಬಂಗಾರಪ್ಪ. ಅವರು ಸಿಎಂ ಆಗಿದ್ದಾಗ ಗ್ರಾಮೀಣ ಭಾಗದ ಯುವಜನರು ಸರಕಾರಿ ಹುದ್ದೆಗಳಿಗೆ ಆಯ್ಕೆಯಾಗಿ, ಆಡಳಿತ ಯಂತ್ರದ ಭಾಗವಾಗಬೇಕೆಂಬ ಉದ್ದೇಶದಿಂದ ಗ್ರಾಮೀಣ ಕೃಪಾಂಕ ನೀಡುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದರು. ನಂತರ ನ್ಯಾಯಾಲಯದ ಆದೇಶದಂತೆ ಗ್ರಾಮೀಣ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಬದಲಾಗಿ, ಮೀಸಲಾತಿಯನ್ನು ಜಾರಿಗೆ ತರಲಾಯಿತು. ವೃತ್ತಿಪರ ಕೋರ್ಸ್‍ಗಳಿಗೆ ಸೇರುವಾಗ ಗ್ರಾಮೀಣ ವಿದ್ಯಾರ್ಥಿಗಳಿಗೆ, ಸರಕಾರಿ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಈಗ ಶೇ.15ರಷ್ಟು ಮೀಸಲಾತಿ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.
ನಾನು ಶಿಕ್ಷಣ ಸಚಿವನಾಗಿರುವಾಗ, ಈ ಮೀಸಲಾತಿಯಲ್ಲಿ ಇನ್ನೊಂದಿಷ್ಟು ಸುಧಾರಣೆ ತಂದು, ಸರಕಾರಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಈ ಮೀಸಲಾತಿಯ ಲಾಭ ಖಚಿತವಾಗಿ ದೊರೆಯುವಂತೆ ಮಾಡುತ್ತಿದ್ದೇನೆ. ಈ ಕಾರ್ಯ ನನ್ನಲ್ಲಿ ಒಂದು ರೀತಿಯಲ್ಲಿ ತೃಪ್ತಿ, ಸಾರ್ಥಕತೆಯ ಭಾವ ಮೂಡಿಸಿದೆ. ಗ್ರಾಮೀಣ ಮಕ್ಕಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ರೀತಿಯ ಕ್ರಾಂತಿಕಾರಕ ತೀರ್ಮಾನವನ್ನು ಅಂದೇ ತೆಗೆದುಕೊಂಡಿದ್ದ ಎಸ್.ಬಂಗಾರಪ್ಪ ಅವರಿಗೆ ಇದೆಲ್ಲದರ ಗೌರವ ಸಲ್ಲಬೇಕು ಎಂದು ಹೇಳಿದ್ದಾರೆ.