×
Ad

ಇ-ಸ್ವತ್ತು ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ಎನ್ಐಸಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Update: 2026-01-02 22:13 IST

ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜ.2: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚನೆ ಹೊರಡಿಸಲಾಗಿದ್ದು, ಈ ನಿಯಮಗಳನ್ವಯ, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ಮಾರ್ಪಡಿಸಿ ಚಾಲನೆಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ತಂತ್ರಾಂಶದಲ್ಲಿ ಈವರೆಗೂ ಒಟ್ಟು 8886 ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸ್ವೀಕರಿಸಲಾಗಿದ್ದು, ತಂತ್ರಾಂಶ ಸಿದ್ಧಪಡಿಸಿರುವ ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲವೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶವನ್ನು ನಿಯಮಗಳನ್ವಯ ಮಾರ್ಪಡು ಮಾಡಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಲಾಗಿನ್ ಸೃಜಿಸಲಾಗಿದೆ. ಇ-ಸ್ವತ್ತು 2.0 ತಂತ್ರಾಂಶವನ್ನು ‘ಭೂಮಿ’, ‘ಕಾವೇರಿ’, ‘ಪಂಚತಂತ್ರ’, ‘ಮೋಜಿಣಿ’ ಹಾಗೂ ಎಸ್ಕಾಂಗಳ ತಂತ್ರಾಂಶಗಳೊಂದಿಗೆ ಸಂಯೋಜಿಸಲಾಗಿದೆ. ಈ ಸಂಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು/ಎಪಿಐ ಸಮಸ್ಯೆಗಳು ಉಂಟಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಹಾಯವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈಗಾಗಲೆ ತರಬೇತಿಯನ್ನು ನೀಡಲಾಗಿದ್ದು, ಮತ್ತೊಮ್ಮೆ ಪುನಶ್ಚೇತನ ತರಬೇತಿಯನ್ನು ಆಯೊಜೀಸಲಾಗಿದೆ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಾರ್ವಜನಿಕ ಪೋರ್ಟಲ್‌ ಮೂಲಕ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆ-11ಎ ಅಥವಾ ನಮೂನೆ 11-ಬಿ ಗಳನ್ನು ತಾವಿರುವಲ್ಲಿಯೇ ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಾರ್ವಜನಿಕ ಪೋರ್ಟಲ್ ಮೂಲಕ ಪಂಚತಂತ್ರ ತಂತ್ರಾಂಶದಲ್ಲಿನ ಆಸ್ತಿಗಳ ಅರ್ಜಿ, ತೆರಿಗೆ ವ್ಯಾಪ್ತಿಯಿಂದ ಹೊರಗಿನ ಆಸ್ತಿಗಳ ಅರ್ಜಿ, ನಮೂನೆ-11 ಎ/ 11ಬಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಹೊಸ ಬಡವಾಣೆ ಮತ್ತು ಬಹುಮಹಡಿ (ಅಪಾಟ್ಮೆರ್ಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಇ-ಸ್ವತ್ತು 2.0 ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿಲ್ಲ. ಆದ್ದರಿಂದ, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಲ್ಲಿಸುವ ಅರ್ಜಿಗಳನ್ನು ನಿಯಮಗಳ ಅನ್ವಯ ಪರಿಶೀಲಿಸಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದ್ದು, ಇಲಾಖೆಯೊಂದಿಗೆ ಸಹಕರಿಸಬೇಕೆಂದು ಪ್ರಿಯಾಂಕ್ ಖರ್ಗೆ ಸಾರ್ವಜನಿಕರನ್ನು ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News