×
Ad

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸಮ್ಮತಿ | ಆರು ಖರೀದಿ ಏಜೆನ್ಸಿಗಳ ನೇಮಕ : ಸಚಿವ ಶಿವಾನಂದ ಪಾಟೀಲ್

Update: 2024-10-25 17:54 IST

ಬೆಂಗಳೂರು : ಬೆಂಬಲ ಬೆಲೆ ಯೋಜನೆಯಡಿ ಶೇಂಗಾ(ನೆಲಗಡಲೆ) ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರಕಾರದ ಮನವಿಗೆ ಕೇಂದ್ರ ಸರಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಪ್ರತಿ ಕ್ವಿಂಟಾಲ್‍ಗೆ 6,783 ರೂ.ನಿಗದಿಪಡಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಹೇಳಿದ್ದಾರೆ.

ಈಗ ಅನುಮತಿ ದೊರೆತಿರುವ ಶೇಂಗಾ ಸೇರಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗಿದೆ. ಇದುವರೆಗೆ ಉಂಡೆಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿಯನ್ನು ಖರೀದಿಸಲಾಗಿದೆ.

ಬೆಲೆ ಕುಸಿತದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಲು ರಾಜ್ಯ ಸರಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದ ಮನವಿಗೆ ಕೇಂದ್ರ ಪುರಸ್ಕರಿಸಿದ್ದು, ಶೇಂಗಾ ಖರೀದಿಗೆ ಆರು ಏಜೆನ್ಸಿಗಳನ್ನು ಗುರುತಿಸಲಾಗಿದೆ. ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್ ಸಂಸ್ಥೆ, ಎನ್ಸಿಸಿಎಫ್ ಸಂಸ್ಥೆ ಹಾಗೂ ಖರೀದಿ ಏಜೆನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಕ್ಸ್‌ ಪೋಸ್ಕ್ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News