ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ : ಸಚಿವ ಯತೀಂದ್ರ ಸಿದ್ದರಾಮಯ್ಯ

Update: 2026-07-21 19:49 IST

ಬೆಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ವಿಳಂಬ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿರುವ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ವಿವಿಧ ಯೋಜನೆಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಿಯಮಿತವಾಗಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಿ, ನಿಗದಿಪಡಿಸಿದ ಕಾಲಮಿತಿಯೊಳಗೆ ಪ್ರತಿಯೊಂದು ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.

ಕೆಲಸದಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಉದ್ದೇಶಪೂರ್ವಕವಾಗಿ ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರ ವಿರುದ್ಧ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ವಿಶ್ವ ಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಯಿಂದ 27 ಲಕ್ಷಕ್ಕೂ ಹೆಚ್ಚು ಜನರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.

ಬೆಳಗಾವಿಯ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದ ಕಾಮಗಾರಿಗಳನ್ನು 2027ರ ಜೂನ್ ವೇಳೆಗೆ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ನೀರು ಶುದ್ಧೀಕರಣ ಘಟಕ ಹಾಗೂ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ್ದೇನೆ. ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ: ಕರ್ನಾಟಕದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮವು ಹಲವು ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅವುಗಳ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಭೂಬಾಲನ್, ಮುಖ್ಯ ಇಂಜಿನಿಯರ್‍ಗಳಾದ ಜೆ.ಆರ್. ನಂದೀಶ್, ಕೆ.ಪಿ.ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News