ಜೈನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ : ಸಚಿವ ಝಮೀರ್ ಅಹ್ಮದ್
ಬೆಂಗಳೂರು : ಜೈನ್ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಪ್ರಸ್ತಾವನೆಯು ಸರಕಾರದ ಮಟ್ಟದಲ್ಲಿ ಪರಿಶೀಲನೆಯಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಕ್ಫ್, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಲಕ್ಷ್ಮಣ್ ಸವದಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಜೈನ್ ಸಮಾಜವು ಆರ್ಥಿಕವಾಗಿ ಹಿಂದುಳಿದಿದ್ದು, ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಜೈನ್ ಸಮುದಾಯದವರ ಕುರಿತು ಸರ್ವೆ ನಡೆಸಲಾಗಿದೆ. 20 ಲಕ್ಷಕ್ಕಿಂತ ಹೆಚ್ಚು ಜೈನ್ ಸಮುದಾಯದ ಜನಸಂಖ್ಯೆಯಿದ್ದು, ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಲಾಗಿದ್ದು, ಈ ಕುರಿತು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಅವರು ಉಲ್ಲೇಖಿಸಿದರು.
ಬ್ಯಾರಿ ನಿಗಮ ಯಾವಾಗ..! :
ಇದೇ ಪ್ರಶ್ನೋತ್ತರ ವೇಳೆ ಸ್ಪೀಕರ್ ಯು.ಟಿ.ಖಾದರ್ ಪ್ರಸ್ತಾಪಿಸಿ, ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರ ಏನಾಯಿತು ಮಂತ್ರಿಗಳೇ ಎಂದು ಝಮೀರ್ ಅಹ್ಮದ್ ಖಾನ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾರ ಕೈಯಿಂದಲೂ ಪ್ರಶ್ನೆ ಹಾಕಿಸಿ, ಉತ್ತರಿಸುವೆ ಎಂದು ಹಾಸ್ಯ ಚಟಾಕಿ ಹಾರಿಸಿದರು.