×
Ad

‘ಮದ್ರಸಾ’ಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಶಿಕ್ಷಣಕ್ಕೆ ಸಚಿವ ಝಮೀರ್ ಅಹ್ಮದ್ ಸೂಚನೆ

Update: 2023-08-28 23:34 IST

ಬೆಂಗಳೂರು, ಆ.28: ಮದ್ರಸಾಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿರುವ ಕೆಎಂಡಿಸಿ ಭವನದಲ್ಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಮದ್ರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದ್ರಸಾಗಳಿದ್ದು, ಆ ಪೈಕಿ 100 ಮದ್ರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೆ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದ್ರಸಾಗಳಲ್ಲಿ ಕಲಿಕೆ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದ ಅವರು, ಮದ್ರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ.ನಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಲು ಹಾಗೂ ಐಐಟಿ, ಎನ್.ಐ.ಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ.ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಅವರು ಸೂಚಿಸಿದರು.

ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಆಝಾದ್ ಮಾದರಿ ಶಾಲೆಗಳ 9, 10 ಹಾಗೂ 12ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಝಮೀರ್ ಅಹ್ಮದ್ ಖಾನ್ ಇದೇ ವೇಳೆ ಬಿಡುಗಡೆ ಮಾಡಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯದ ನಿರ್ದೇಶಕ ಜೀಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್, ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಖಾನ್ ಪರ್ವೇಝ್, ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್ ಸರ್ದಾರ್ ಉಪಸ್ಥಿತರಿದ್ದರು.

ಎರಡು ವರ್ಷಗಳಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿ ವರದಿ ನೀಡಬೇಕು. ಎಷ್ಟು ಮೊತ್ತದ ಕಾಮಗಾರಿ ಕೈಗೊಳ್ಳಲಾಗಿದೆ, ಎಷ್ಟು ಮೊತ್ತ ಪಾವತಿಗೆ ಬಾಕಿ ಇದೆ, ಕಾಮಗಾರಿ ಪ್ರಮಾಣ, ಗುತ್ತಿಗೆದಾರರಿಗೆ ಪಾವತಿಸಿರುವ ಮೊತ್ತ ಕುರಿತು ಸಮಗ್ರ ವರದಿ ನೀಡುವಂತೆ ಝಮೀರ್ ಅಹ್ಮದ್ ಖಾನ್ ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9, 10 ಹಾಗೂ 12ನೆ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯ ವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News