ಒಳಮೀಸಲಾತಿ ಜಾರಿ ಸಂಬಂಧ ಗೃಹ ಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಸಚಿವರ ಸಭೆ
ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಸಂಬಂಧ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಉಪಜಾತಿಗಳ ಸಚಿವರು, ಶಾಸಕರು ಸಮಾಲೋಚನೆ ನಡೆಸಿದರು.
ಅ.24ಕ್ಕೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿಯೂ ಒಳಮೀಸಲಾತಿ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ. ಒಳಮೀಸಲಾತಿ ಜಾರಿಗೆ ಕೆಲ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ನಡೆಸಲಾಗಿದೆ. ಸಭೆಯಲ್ಲಿ ಸಚಿವರಾದ ಡಾ.ಎಚ್. ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಆರ್.ಬಿ. ತಿಮ್ಮಾಪುರ್, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ಹಲವರು ಭಾಗವಹಿಸಿದ್ದರು ಎಂದು ಗೊತ್ತಾಗಿದೆ.
‘ಒಳಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಸಂವಿಧಾನ ಬದ್ಧ ಅಧಿಕಾರವಿದೆ’ ಎಂದು ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ತೀರ್ಪು ಜಾರಿಗೊಳಿಸಲು ಇರುವ ಗೊಂದಲಗಳನ್ನು ನಿವಾರಿಸಲು ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.