×
Ad

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ; ಜಿ.ಟಿ.ದಿನೇಶ್ ಕುಮಾರ್ ಜಾಮೀನು ಅರ್ಜಿ ವಜಾ

Update: 2026-01-20 22:36 IST

ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಬಂಧನದಿಂದ ಮುಕ್ತಗೊಳಿಸುವಂತೆ ಕೋರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಜಾರಿ ನಿರ್ದೇಶನಾಲಯದ (ಈಡಿ) ಬಂಧನದಲ್ಲಿರುವ ದಿನೇಶ್‌ ಕುಮಾರ್‌ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು.

ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದಿನೇಶ್‌ ಕುಮಾರ್‌ ಸೆರೆವಾಸ ಮುಂದುವರಿಯಲಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ್ದ ದಿನೇಶ್ ಪರ ವಕೀಲರು, ಅರ್ಜಿದಾರರು ಪ್ರಕರಣದ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಆದ್ದರಿಂದ, ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು.

ಇದನ್ನು ಆಕ್ಷೇಪಿಸಿದ್ದ ಈಡಿ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಾಧಾರ ಲಭ್ಯವಾಗಿವೆ. ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಅದರಲ್ಲಿ ಎಲ್ಲ ವಿವರಗಳನ್ನು ಉಲ್ಲೇಖಿಸಲಾಗಿದೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಿಡುಗಡೆ ಮಾಡಬಾರದು ಎಂದು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News