ಆರೆಸ್ಸೆಸ್ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ: ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ
ಬೆಂಗಳೂರು: ಆರೆಸ್ಸೆಸ್ ಆಯೋಜಿಸಿರುವ ಗುರುಪೂಜಾ ಉತ್ಸವದ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ನಾಗತಿಹಳ್ಳಿಯವರು, ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ''ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ.ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ.ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ''
''ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ,ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ.ಅದನ್ನೇ ಮುಂದುವರೆಸುತ್ತೇನೆ''
''ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ,ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು'' ಎಂದು ಅವರು ಬರೆದುಕೊಂಡಿದ್ದಾರೆ.