ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎಗೆ ಜಯ; ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಸೋಲು
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ 4 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಎನ್ಡಿಎ (ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಭರ್ಜರಿ ಗೆಲುವು ಸಾಧಿಸಿದೆ.
ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಜಯಗಳಿಸಿದ್ದಾರೆ.
ಗೆಲುವಿನ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಮೂರು ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲು ಎದುರಾಗಿದ್ದು, ಮೈತ್ರಿಕೂಟದ ನಾಯಕರಲ್ಲಿ ಹೊಸ ಹುರುಪು ಮೂಡಿಸಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ್ ನಮೋಶಿ ಗೆಲುವು :
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ವಿರುದ್ಧ ಅವರು ಸ್ಪಷ್ಟ ಅಂತರದ ಜಯ ದಾಖಲಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ; ಎ.ಪಿ.ರಂಗನಾಥ್ ಗೆಲುವು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 10.810 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.
ಅ.23ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು ಇದ್ದರು. ಮಂಗಳವಾರ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು,ಎ.ಪಿ. ರಂಗನಾಥ್ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಪಶ್ಚಿಮ ಪದವೀಧರರ ಕ್ಷೇತ್ರ: ಎಸ್.ವಿ ಸಂಕನೂರ ಹ್ಯಾಟ್ರಿಕ್ ಗೆಲುವು
ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ 33,711 ಮತ ಗಳಿಸಿ ಗೆಲುವು ಸಾಧಿಸಿದ್ಧಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ನ ಮೋಹನ ಲಿಂಬಿಕಾಯಿ ಅವರನ್ನು 9,323 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಸತತ ಮೂರನೇ ಬಾರಿಗೆ ಮೇಲ್ಮನೆ ಪ್ರವೇಶಿಸಿರುವ ಪ್ರೊ.ಎಸ್.ವಿ.ಸಂಕನೂರ್ ಅವರು 2014ರ ಚುನಾವಣೆಯಲ್ಲಿ 22, 507 ಹಾಗೂ 2020ರ ಚುನಾವಣೆಯಲ್ಲಿ 23, 857 ಮತಗಳನ್ನು ಪಡೆದಿದ್ದರು.
ಆಗ್ನೇಯ ಪದವೀಧರ ಕ್ಷೇತ್ರ; ಬಿಜೆಪಿಯ ಸುರೇಶ್ ಗೆ ಭರ್ಜರಿ ಜಯ
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್ (ಸೋಮೇಶ್ವರ) ಅವರು ಗೆಲುವಿನ ನಗೆ ಬೀರಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ 66,020 ಮತಗಳನ್ನು ಪಡೆದ ಅವರು, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಅವರನ್ನು 23,098 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ಅಕ್ಟೋಬರ್ 28ರಂದು ಪ್ರಕಟವಾದ ಸುತ್ತುವಾರು ಮತ ಎಣಿಕೆಯ ವಿವರಗಳ ಪ್ರಕಾರ, ಶಶಿ ಹುಲಿಕುಂಟೆಮಠ 42,922 ಮತಗಳನ್ನು ಪಡೆದಿದ್ದಾರೆ. ಎಲ್ಲ 10 ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡ ಸುರೇಶ್, ಅಂತಿಮವಾಗಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಒಟ್ಟಾರೆ, ನಾಲ್ಕು ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಎನ್ಡಿಎಗೆ ರಾಜಕೀಯ ಬಲ ತುಂಬಿದೆ.