ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು' ಎಂಬ ಘೋಷಣೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪ್ರಭಾಕರ್ ಟಿ. ಆದೇಶ ಹೊರಡಿಸಿದ್ದು, ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು 2025-26ನೆ ಸಾಲಿನ ಆಯವ್ಯಯ ಘೋಷಿಸಲಾಗಿದ್ದು, ಅದರಂತೆ ಕ್ರಮ ವಹಿಸಲಾಗುತ್ತಿದೆ ಎಂದಿದ್ದಾರೆ.
ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸ್ಥಳ, ನಿರ್ಮಾಣ ಮತ್ತು ಕಾರ್ಯಸಾಧ್ಯತೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಆದುದರಿಂದ ಆಯವ್ಯಯ ಕಂಡಿಕೆಯನ್ನು ಹೆಚ್ಚಿನ ಪರಿಶೀಲನೆಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯು ಕ್ರಮ ಕೈಗೊಳ್ಳುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಪುತ್ತೂರು ತಾಲ್ಲೂಕು ಆಸ್ಪತ್ರೆ ಒಟ್ಟು 5.16 ಎಕರೆ ಜಮೀನಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಲೇಜು ಸ್ಥಾಪನೆಗೆ ಜಮೀನು ಸಾಕಾಗುವುದಿಲ್ಲ. ಹೀಗಾಗಿ ಪುತ್ತೂರು ಪಟ್ಟಣಕ್ಕೆ ಹೊಂದಿಕೊಂಡಂತೆ ಸೆಡಿಯಾಪು ಗ್ರಾಮದ ಬಳಿ 40 ಎಕರೆ ಜಮೀನನ್ನು ವೈದ್ಯಕೀಯ ಕಾಲೇಜು ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿದೆ. ಈ ಜಾಗದಲ್ಲಿ ನಿರ್ಮಾಣ ಮಾಡಲು 200 ಕೋಟಿ ರೂ.ವ್ಯಯಿಸಬೇಕಾಗಿದೆ ಎಂದು ಮುಖ್ಯ ಇಂಜಿನಿಯರ್ ಪ್ರಸ್ತಾವ ಸಲ್ಲಿಸಿದ್ದು, ಈ ಕಡತವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಹಿಸಲಾಗಿದೆ ಎಂದು ವಿವರಿಸಿದ್ದಾರೆ.