ನೂತನ ಸಚಿವರಿಗೆ ಖಾತೆ ಹಂಚಿಕೆ ಬಿಕ್ಕಟ್ಟು: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ 14 ಮಂದಿ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಪ್ರಮುಖ ಖಾತೆಗಳಿಗಾಗಿ ಹಿರಿಯ ಸಚಿವರು ಪಟ್ಟು ಹಿಡಿದಿದ್ದು, ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ ಸಚಿವರು, ‘ತಮಗೆ ಈ ಹಿಂದೆ ನೀಡಿದ್ದ ಖಾತೆಗಳನ್ನು ನೀಡಿ, ಅಲ್ಲಿ ಇನ್ನೂ ಕೆಲ ಅತೀಮುಖ್ಯ ಕಾರ್ಯ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಿದೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಖಾತೆಗಳ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸರಕಾರಿ ನಿವಾಸ ಕಾವೇರಿಯಲ್ಲಿ ಸಮಾಲೋಚನೆ ನಡೆಸಿದರು. ಗುರುವಾರ ರಾತ್ರಿ ಅಥವಾ ನಾಳೆ (ಜೂ.5) ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ, ಆ ಪಟ್ಟಿಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಲೋಕಭವನಕ್ಕೆ ರವಾನಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ರಾಮಲಿಂಗಾರೆಡ್ಡಿ ಅಸಮಾಧಾನ?
ಈ ಬೆಳವಣಿಗೆಗಳ ನಡುವೆಯೇ ಸಚಿವ ರಾಮಲಿಂಗಾರೆಡ್ಡಿ, ‘ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೆ ನೀಡಬೇಕು. ಅದನ್ನು ಬಿಟ್ಟು ಗೃಹ, ಜಲಸಂಪನ್ಮೂಲ ಸೇರಿದಂತೆ ಇತರೆ ಯಾವುದೇ ಖಾತೆಯ ಹೊಣೆಗಾರಿಕೆಯನ್ನು ನೀಡಿದರೂ ನನಗೆ ಬೇಡ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಶಾಸಕನಾಗಿಯೇ ಇರುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟಾರೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವರಿಗೆ ಖಾತೆ ಹಂಚಿಕೆ ಮಾಡುವುದೇ ಕಗ್ಗಂಟ್ಟಾಗಿದೆ. ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವರಿಗೆ ಖಾತೆ ಹಂಚಿಕೆ ಬಿಕ್ಕಟ್ಟನ್ನು ಬಗೆಹರಿಸುವ ಸಾಧ್ಯತೆಗಳಿವೆ.