ಅಲ್ಪಸಂಖ್ಯಾತರ ನಿರ್ದೇಶನಾಲಯ | ವಿದ್ಯಾರ್ಥಿ ವೇತನ, ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಝಮೀರ್ ಅಹ್ಮದ್ ಚಾಲನೆ
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಪ್ರಸಕ್ತ ವರ್ಷದ ಮುಕ್ತ ವಿವಿ ಪ್ರವೇಶ, ಹಾಸ್ಟೆಲ್ ಪ್ರವೇಶ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ವಿದ್ಯಾರ್ಥಿವೇತನ(ಸ್ಕಾಲರ್ ಶಿಪ್)ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಚಿವ ಝಮೀರ್ ಅಹ್ಮದ್ ಖಾನ್ ಚಾಲನೆ ನೀಡಿದರು.
ಶುಕ್ರವಾರ ವಸಂತ ನಗರದಲ್ಲಿರುವ ಅಲ್ಪಸಂಖ್ಯಾತರ ನಿರ್ದೇಶನಾಲಯದ ಕಚೇರಿಯಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಝಮೀರ್ ಅಹ್ಮದ್ ಖಾನ್, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದು ಮನೆಯಲ್ಲೇ ಕುಳಿತು ಪದವಿ ವ್ಯಾಸಂಗ ಮಾಡಬಹುದಾಗಿದೆ ಎಂದು ಹೇಳಿದರು.
ಅರ್ಜಿ ಸಲ್ಲಿಸಲು ಸೆ.15 ಅಂತಿಮ ದಿನವಾಗಿದ್ದು, ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದೆ. ಇದಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 5.50 ಕೊಟಿ ರೂ.ವೆಚ್ಚ ಮಾಡಲಾಗುತ್ತಿದೆ. ನಿರ್ದೇಶನಾಲಯದ ವ್ಯಾಪ್ತಿಯಲ್ಲಿರುವ 368 ಮೆಟ್ರಿಕ್ ನಂತರದ ಹಾಸ್ಟೆಲ್ ಗಳಲ್ಲಿ ಇಡೀ ವರ್ಷ ಅರ್ಜಿ ಹಾಕಲು ಇದೇ ಮೊದಲ ಬಾರಿಗೆ ಅವಕಾಶ ಕಲ್ಪಿಸಲಾಗಿದ್ದು, ಮೆರಿಟ್ ಆಧಾರದ ಮೇಲೆ ಸೀಟ್ ಹಂಚಿಕೆಯಾಗಲಿದೆ ಎಂದು ಅವರು ತಿಳಿಸಿದರು.
ಐಎಎಸ್/ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಕರೆಯಲಾಗಿದೆ. ಇದಕ್ಕೆ 20 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ, ಪಿಎಚ್‍ಡಿ, ಐಐಟಿ, ಐಐಎಂ, ವಿದೇಶದಲ್ಲಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ 305 ಕೋಟಿ ರೂ.ಸ್ಕಾಲರ್ ಶಿಪ್ ಹಾಗೂ ಶುಲ್ಕ ಮರು ಪಾವತಿ ಯಾಗಲಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಕಾರ್ಯದರ್ಶಿ ಸಲ್ಮಾ ಫಹೀಮ್, ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಜಿಲಾಜಿ ಮೊಕಾಶಿ ಉಪಸ್ಥಿತರಿದ್ದರು.
ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್ https://dom.karnataka.gov.in/english ವೀಕ್ಷಿಸಬಹುದು ಎಂದು ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದ್ದಾರೆ.